ಉಜಿರೆ: ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಕೆಪಿಸಿಸಿ ಅಲ್ಪಸಂಖ್ಯಾತ ಸಮಿತಿ ಆಗ್ರಹ

Prasthutha|

ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ,ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಿ, ನೈಜ ಆರೋಪಿಗಳನ್ನು ಬಂಧಿಸಬೇಕೆಂದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿಯ ಉಪಾಧ್ಯಕ್ಷರಾದ ನ್ಯಾಯವಾದಿ ನೂರುದ್ದೀನ್ ಸಾಲ್ಮರ ಸರಕಾರವನ್ನು ಒತ್ತಾಯಿಸಿದ್ದಾರೆ.
“ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶದ ದಿನ ಉಜಿರೆಯಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೇರಿದ್ದು, ಅಲ್ಲಿ ತಮ್ಮ ತಮ್ಮ ರಾಜಕೀಯ ಪಕ್ಷಗಳ ಪರ ಘೋಷಣೆ ಕೂಗುವ ಸಮಯ, ಪಾಕಿಸ್ತಾನ ಪರ ಘೋಷಣೆಯು ಕೇಳಿ ಬಂದು ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿದ್ದರು. ಮಾತ್ರವಲ್ಲ ಅದೇ ದಿನ ಕೆಲವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರು.ತದನಂತರ ಪಾಕಿಸ್ತಾನ ಪರ ಘೋಷಣೆ ಕೂಗಿದವರು ಎನ್ನಲಾದ ಕೆಲವರ ಫೋಟೋ ಮತ್ತು ವಿಡಿಯೋ ಕ್ಲಿಪ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದವು. ಈ ಬಗ್ಗೆ ಪರ-ವಿರೋಧ ದೂರುಗಳು ಪೊಲೀಸರಿಗೆ ಸಲ್ಲಿಕೆಯಾಗಿದೆ. ಇದರಿಂದ ಸಾರ್ವಜನಿಕರು ತೀವ್ರ ಗೊಂದಲಕ್ಕೆ ಒಳಗಾಗಿದ್ದಾರೆ. ಮಾತ್ರವಲ್ಲ ಇದರಿಂದ ನ್ಯಾಯಾಂಗ ಬಂಧನಕ್ಕೆ ಒಳಗಾದರು, ಅನ್ಯಾಯವಾಗಿ ಜೈಲು ಕಂಬಿಯನ್ನು ಎಣಿಸುವಂತಾಯಿತೆ? ನೈಜ ಅಪರಾಧಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಂಡರೆ.? ಎಂಬ ಸಹಜ ಪ್ರಶ್ನೆ ಉದ್ಭವಿಸಿದೆ” ಎಂದು ಅವರು ಪ್ರಕಟನೆಯಲ್ಲಿ ಹೇಳಿದ್ದಾರೆ.
“ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನೈಜ ಅಪರಾಧಿಗಳನ್ನು ಪತ್ತೆ ಹಚ್ಚುವ ಕೆಲಸವನ್ನು ಮಾಡಬೇಕು.ಪೊಲೀಸರು ಒತ್ತಡದಿಂದ ತರಾತುರಿಯಲ್ಲಿ ಕೆಲಸ ಮಾಡಿದರೆ ಮತ್ತಷ್ಟು ಅಮಾಯಕರು ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ” ಎಂದು ನೂರುದ್ದೀನ್ ಹೇಳಿದ್ದಾರೆ.
“ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಳಗಾದ ವ್ಯಕ್ತಿಗಳು ಅಮಾಯಕರಾಗಿದ್ದಲ್ಲಿ, ಅವರನ್ನು ಕೂಡಲೇ ಬಿಡುಗಡೆ ಮಾಡುವ ಪ್ರಕ್ರಿಯೆ ಆರಂಭಿಸಬೇಕು. ನೈಜ ತಪ್ಪಿತಸ್ಥರು ಯಾರೇ ಆಗಿರಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಸರಕಾರವನ್ನು ಅವರು ಒತ್ತಾಯಿಸಿದ್ದಾರೆ

- Advertisement -



Join Whatsapp