►► ಬಾಬರಿ ಮಸೀದಿ ಧ್ವಂಸ ಪ್ರಕರಣ ತೀರ್ಪಿಗೆ ಮೇಲ್ಮನವಿ ಸಲ್ಲಿಸಲು ತೀರ್ಮಾನ
ನವದೆಹಲಿ: ಏಕರೂಪ ನಾಗರಿಕ ಸಂಹಿತೆ ವಿರುದ್ಧ ಜನಾಭಿಪ್ರಾಯ ಮೂಡಿಸುವಲ್ಲಿ ಜಾಗೃತಿಗಳನ್ನು ಹಮ್ಮಿಕೊಳ್ಳಲು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ ಬಿ) ಮುಂದಾಗಿದೆ. ವಿಭಿನ್ನ ಸಂಸ್ಕೃತಿ ಮತ್ತು ನಾಗರಿಕತೆಗಳನ್ನೊಳಗೊಂಡ ಭಾರತದಂತಹ ದೇಶಕ್ಕೆ ಏಕರೂಪ ನಾಗರಿಕ ಸಂಹಿತೆ ಸಮರ್ಥನೀಯವಲ್ಲವಾದುದರಿಂದ ಮಂಡಳಿ ಈ ನಿರ್ಧಾರ ಕೈಗೊಂಡಿದೆ ಎಂದು ಎಐಎಂಪಿಎಲ್ ಬಿ ಸದಸ್ಯ ಝಫರ್ ಯಾಬ್ ಜಿಲಾನಿ ಹೇಳಿದ್ದಾರೆ. ಇತ್ತೀಚೆಗೆ ನಡೆದ ಮಂಡಳಿಯ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅ.11 ಮತ್ತು 13ರಂದು ನಡೆದ ಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮತ್ತು ಬಾಬರಿ ಮಸೀದಿ ಧ್ವಂಸ ಪ್ರಕರಣಗಳಿಗೆ ಸಂಬಂಧಿಸಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆಡಳಿತಾರೂಢ ಬಿಜೆಪಿಯಲ್ಲಿ ಈಗ ಏಕರೂಪ ನಾಗರಿಕ ಸಂಹಿತೆಯ ಅಜೆಂಡಾ ಬಾಕಿಯಿದೆ, ಅದನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಅವರು ಕಾರ್ಯಪ್ರವೃತ್ತರಾಗಲಿದ್ದಾರೆ ಎಂಬುದು ಮಂಡಳಿ ಸದಸ್ಯರ ಅಭಿಪ್ರಾಯವಾಗಿತ್ತು ಎಂದು ಜಿಲಾನಿ ತಿಳಿಸಿದ್ದಾರೆ.
ಬಾಬರಿ ಮಸೀದಿ ಧ್ವಂಸ ಪ್ರಕರಣದ ವಿಶೇಷ ಸಿಬಿಐ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಮಂಡಳಿ ನಿರ್ಧರಿಸಿದೆ. ಮಂಡಳಿಯ ಪ್ರತಿನಿಧಿಗಳು ತೀರ್ಪಿನ ವಿರುದ್ಧ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
28 ವರ್ಷಗಳ ಹಿಂದೆ ಬಾಬರಿ ಮಸೀದಿ ಧ್ವಂಸದಲ್ಲಿ ಭಾಗಿಯಾಗಿದ್ದ ಪ್ರಕರಣದಲ್ಲಿ ಬಿಜೆಪಿ ಪ್ರಮುಖರಾದ ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಉಮಾ ಭಾರತಿ ಸೇರಿದಂತೆ ಎಲ್ಲ 32 ಮಂದಿ ಆರೋಪಿಗಳನ್ನು ವಿಶೇಷ ಕೋರ್ಟ್ ಖುಲಾಸೆಗೊಳಿಸಿದೆ.