ನವದೆಹಲಿ: ತಬಲಾ ಮಾಂತ್ರಿಕ ಜಾಕೀರ್ ಹುಸೇನ್ (73) ಅವರು ಇಂದು (ಸೋಮವಾರ) ರಕ್ತದ ಒತ್ತಡ ಮತ್ತು ಹೃದಯ ಸಂಬಂಧಿ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ.
ಜಾಕೀರ್ ಹುಸೇನ್ ಅವರ ನಿಧನಕ್ಕೆ ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರು ಸೇರಿದಂತೆ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ಸೂಚಿಸಿದ್ದಾರೆ.
‘ತಬಲಾ ಮಾಂತ್ರಿಕ ಉಸ್ತಾದ್ ಜಾಕೀರ್ ಹುಸೇನ್ ಅವರ ನಿಧನದಿಂದ ಭಾರತ ಮತ್ತು ವಿಶ್ವದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಜಾಕೀರ್ ಹುಸೇನ್ ಅವರು ತಾಳವಾದ್ಯ, ಅಸಾಧಾರಣ ಪ್ರತಿಭೆಯೊಂದಿಗೆ ತಮ್ಮ ತಂದೆಯ ಪರಂಪರೆಯನ್ನು ವೈಭವಯುತವಾಗಿ ಮುನ್ನಡೆಸಿದ್ದಾರೆ. ಅವರ ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಗೌರವಗಳು ಇದಕ್ಕೆ ಸಾಕ್ಷಿಯಾಗಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ಪ್ರಪಂಚದಾದ್ಯಂತದ ಅಭಿಮಾನಿಗಳಿಗೆ ನಮ್ಮ ಆಳವಾದ ಸಂತಾಪಗಳು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ವಿಶ್ವವಿಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ವರ್ಷಗಳ ಕಾಲ ತಬಲಾ ವಾದನದ ಮೂಲಕ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸುತ್ತಿದ್ದ ನೈಜ ಕಲಾಸಾಧಕನ ನಿಧನದಿಂದ ಸಂಗೀತಲೋಕ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ಪ್ರಾರ್ಥಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
‘ಲೆಜೆಂಡರಿ ತಬಲಾ ಮಾಂತ್ರಿಕ ಉಸ್ತಾದ್ ಜಾಕೀರ್ ಹುಸೇನ್ ಅವರ ನಿಧನ ನಿಜಕ್ಕೂ ದುಃಖ ತಂದಿದೆ. ಅಗಾಧ ಪ್ರತಿಭೆ ಮೂಲಕ ಹುಸೇನ್ ವಿಶ್ವದಾದ್ಯಂತ ಮನ್ನಣೆ ಗಳಿಸಿದ್ದರು. ಹಾಗೆಯೇ ಅವರು ಸಾರ್ವಕಾಲಿಕ ಶ್ರೇಷ್ಠ ಸಂಗೀತಗಾರರಲ್ಲಿ ಒಬ್ಬರಾಗಿದ್ದರು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಉದ್ಯಮಿ ಆನಂದ್ ಮಹೀಂದ್ರಾ ಅವರು ಜಾಕೀರ್ ಹುಸೇನ್ ಅವರ ಸೇವೆಯನ್ನು ಸ್ಮರಿಸಿದ್ದಾರೆ.
‘ಇದು ಬಹಳ ದುಃಖದ ದಿನ’ ಎಂದು ಬಾಲಿವುಡ್ ನಟ ಅಮಿತಾಭ್ ಬಚ್ಚನ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.