ಬೆಂಗಳೂರು : ಕೊರೋನ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದ ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ. ಎಸ್.ಆರ್. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ. ಕೊರೋನ ಸಂಕಷ್ಟ ಆರಂಭದ ದಿನಗಳಲ್ಲಿ ಭಾರೀ ಸುದ್ದಿಯಾಗಿದ್ದ ಜ್ಯುಬಿಲಿಯಂಟ್ ಕಾರ್ಖಾನೆಯ ಸೋಂಕಿತರನ್ನು ನಿರ್ವಹಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದ ಡಾ. ನಾಗೇಂದ್ರ ಅವರ ಹಠಾತ್ ಆತ್ಮಹತ್ಯೆ ಬಗ್ಗೆ ಹಲವು ಅನುಮಾನಗಳು ಎದ್ದಿವೆ. ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಇದೀಗ ಪ್ರಕರಣದ ತನಿಖೆ ನಡೆಸಿ ಏಳು ದಿನಗಳೊಳಗೆ ವರದಿ ನೀಡುವಂತೆ ಮುಖ್ಯಮಂತ್ರಿಯವರು ಆದೇಶಿಸಿದ್ದಾರೆ.
ಅಲ್ಲದೆ, ಮೃತರ ಕುಟುಂಬಕ್ಕೆ ಕೂಡಲೇ ರೂ.50 ಲಕ್ಷ ಪರಿಹಾರ ಕೂಡ ಘೋಷಿಸಲಾಗಿದೆ. ಅವರ ಕುಟುಂಬದ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡಲು ನಿರ್ಧರಿಸಲಾಗಿದೆ. ಸರಕಾರದ ಇತರ ಸೌಲಭ್ಯಗಳನ್ನೂ ಶೀಘ್ರವೇ ತಲುಪಿಸಬೇಕು ಎಂದು ಮುಖ್ಯಮಂತ್ರಿ ಆದೇಶಿಸಿದ್ದಾರೆ.