ಪಾಕ್ ಪರ ಘೋಷಣೆ | ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲು ಮುಸ್ಲಿಂ ಸಂಘಟನೆಗಳ ಒಕ್ಕೂಟ ಆಗ್ರಹ

Prasthutha|

ಪೊಲೀಸರು ಕ್ರಮಕೈಗೊಳ್ಳದಿದ್ದರೆ ಪ್ರತಿಭಟನೆ ಎಚ್ಚರಿಕೆ

- Advertisement -

ಬೆಳ್ತಂಗಡಿ: ಉಜಿರೆಯಲ್ಲಿ ಇತ್ತೀಚೆಗೆ ಮತ ಎಣಿಕೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿ, ಅದರ ಆರೋಪವನ್ನು  ಎಸ್.ಡಿ.ಪಿ.ಐ ಕಾರ್ಯಕರ್ತರ ಮೇಲೆ ಕಟ್ಟಿರುವುದು ತೀವ್ರ ಖಂಡನಾರ್ಹ. ಪ್ರಕರಣದಲ್ಲಿ ಮೂವರು ಅಮಾಯಕ ಯುವಕರ ಮೇಲೆ ಪೊಲೀಸರು ದೇಶ ದ್ರೋಹ ಪ್ರಕರಣ ದಾಖಲಿಸಿ ಜೈಲಿಗಟ್ಟಿದ್ದು ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಮುಸ್ಲಿಂ ಸಂಘಟನೆಗಳ ಒಕ್ಕೂಟ ಇಂದು ಆಗ್ರಹಿಸಿದೆ.

“ಪೊಲೀಸರು ಯಾವುದೇ ತನಿಖೆ ನಡೆಸದೆ ತಮ್ಮ ಕೋಮು ಮನಸ್ಥಿತಿ ಆಧಾರದಲ್ಲಿ ಅಮಾಯಕ ಯುವಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಮುಸ್ಲಿಮರು ಹುಟ್ಟು ದೇಶಪ್ರೇಮಿಗಳು. ಈ ದೇಶದ ಸ್ವಾತಂತ್ರ್ಯಕ್ಕಾಗಿ ಸಾವಿರಾರು ಮುಸ್ಲಿಮರು ಪ್ರಾಣವನ್ನು ಅರ್ಪಿಸಿದ್ದಾರೆ. ಪೊಲೀಸರು ಮುಸ್ಲಿಮರ ದೇಶಪ್ರೇಮವನ್ನು ಪರೀಕ್ಷಿಸುವ ಅಗತ್ಯವಿಲ್ಲ” ಎಂದು ದ.ಕ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮಾಜಿ ಮೇಯರ್  ಅಶ್ರಫ್ ಕೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -

 ಉಜಿರೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಕ್ ಪರ ಘೋಷಣೆ ಕೂಗಿದ ವೀಡಿಯೋ ವೈರಲ್ ಆಗುತ್ತಿದ್ದರೂ ಪೊಲೀಸರು ಮೌನ ವಹಿಸಿರುವುದು ಹಲವಾರು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಅವರು ಹೇಳಿದ್ದಾರೆ.

“ತಕ್ಷಣ ಪೊಲೀಸರು ಪಾಕ್ ಪರ ಘೋಷಣೆ ಕೂಗಿದ ನೈಜ ಆರೋಪಿಗಳ  ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಪ್ರಕರಣ ದಾಖಲು ಗೊಳಿಸದೆ ಮೃದು ಧೋರಣೆ ತೋರಿದರೆ, ಇದು ಪೊಲೀಸರ ಭಾಗೀಧಾರಿಕೆಯಿಂದಲೆ ನಡೆದ ಪೂರ್ವ ಯೋಜಿತ ಕೃತ್ಯ ಎಂದು ಪರಿಗಣಿಸಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

ಉನ್ನತ ಪೊಲೀಸ್ ಅಧಿಕಾರಿಗಳು ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ ದೇಶದ್ರೋಹದ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಅವರು ಎಚ್ಚರಿಸಿದ್ದಾರೆ.



Join Whatsapp