ರಾಜೀನಾಮೆ ಘೋಷಣೆ ಮಾಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ನವದೆಹಲಿ: ಎಎಪಿ ಪಕ್ಷದ ನಾಯಕ, ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ನಿಂದ ಜಾಮೀನು ಪಡೆದು ಜೈಲಿನಿಂದ ಹೊರ ಬಂದ ಎರಡು ದಿನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್ ರಾಜೀನಾಮೆ ನೀಡುವ ಕುರಿತು ಘೋಷಿಸಿದ್ದಾರೆ.
ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಅರವಿಂದ ಕೇಜ್ರಿವಾಲ್ ರಾಜೀನಾಮೆ ಘೋಷಣೆ ಮಾಡಿದರು. ಎರಡು ದಿನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಜನರು ತಮ್ಮ ತೀರ್ಪು ನೀಡುವ ತನಕ ನಾನು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲಾರೆ ಎಂದು ಕೇಜ್ರಿವಾಲ್ ಹೇಳಿದರು.
ಆರೋಪ ಹೊತ್ತುಕೊಂಡು ಕುರ್ಚಿಯಲ್ಲಿ ಕೂರುವುದಿಲ್ಲ. ಅಗ್ನಿಪರೀಕ್ಷೆಗೆ ಸಿದ್ದವಾಗಿದ್ದೇವೆ. ಮನೀಶ್ ಸಿಸೋಡಿಯಾ ಸೇರಿದಂತೆ ಎಲ್ಲರೂ ಚುನಾವಣೆಗೆ ಹೋಗುತ್ತೇವೆ. ಆಮ್ ಆದ್ಮಿ ಪಕ್ಷ ಮತ್ತು ನಾವು ಅರ್ಹತೆ ಹೊಂದಿದ್ದರೆ ಮಾತ್ರ ಮತ ನೀಡಿ, ಜನರ ತೀರ್ಪನ್ನು ನಾವು ಗೌರವಿಸುತ್ತೇವೆ ಎಂದು ಅರವಿಂದ ಕೇಜ್ರಿವಾಲ್ ಘೋಷಣೆ ಮಾಡಿದರು.