Home ಟಾಪ್ ಸುದ್ದಿಗಳು ರಾಜ್ಯದಲ್ಲಿ ರಾಜಕೀಯ ಗೊಂದಲವೇ ಇಲ್ಲ ಎಂದ ಯಡಿಯೂರಪ್ಪ

ರಾಜ್ಯದಲ್ಲಿ ರಾಜಕೀಯ ಗೊಂದಲವೇ ಇಲ್ಲ ಎಂದ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಗೊಂದಲವೇ ಇಲ್ಲ. ಯಾರೋ ಒಂದಿಬ್ಬರು ತಮ್ಮ ವಿರುದ್ಧ ಮಾತನಾಡಿದಾಗ ಮಾಧ್ಯಮಗಳು ಅದನ್ನು ಗೊಂದಲ ಎಂದು ಹೇಳುತ್ತಿವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ 60ಕ್ಕೂ ಹೆಚ್ಚಿನ ಶಾಸಕರು ಪಕ್ಷದ ರಾಜ್ಯ ಉಸ್ತುವಾರಿಯನ್ನು ಭೇಟಿ ಮಾಡಿದ್ದಾರೆ. ಯಾರೋ ಒಂದಿಬ್ಬರು ನಮ್ಮ ವಿರುದ್ಧ ಮಾತನಾಡಿದ್ದಾರೆ. ಅವರು ಹೊಸದಾಗಿ ಮಾತನಾಡುತ್ತಿಲ್ಲ, ಹಿಂದಿನಿಂದಲೂ ಅವರು ಇದೇ ರೀತಿ ಮಾತನಾಡುತ್ತಿದ್ದಾರೆ. ಅವರಿಗೆ ಭೇಟಿ ಮಾಡಿ ಮಾತನಾಡಲು ಅವಕಾಶವನ್ನೂ ಕೊಟ್ಟಿಲ್ಲ. ಆದ್ದರಿಂದ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಒಟ್ಟಾಗಿ, ಒಂದಾಗಿ ನಾವು ಅಭಿವೃದ್ಧಿ ಕಾರ್ಯಗಳತ್ತ ಗಮನಹರಿಸುತ್ತಿದ್ದೇವೆ. ಸಚಿವ ಸಂಪುಟ ಸಹೋದ್ಯೋಗಿಗಳು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ತಮ್ಮ ವಿರುದ್ಧ ಮಾತನಾಡಿದ ಒಂದಿಬ್ಬರನ್ನು ಕರೆದು ಮಾತನಾಡುವ ಪ್ರಯತ್ನ ಮಾಡುತ್ತೇವೆ ಎಂದರು.


ಎಚ್.ವಿಶ್ವನಾಥ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಲು ಇಷ್ಟಪಡುವುದಿಲ್ಲ. ಅವರ ವಿರುದ್ಧ ಯಾವ ಕ್ರಮಕೈಗೊಳ್ಳಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಮುಖ್ಯಮಂತ್ರಿ ಉತ್ತರಿಸಿದರು.
ಬಿತ್ತನೆ ಬೀಜ ವಿತರಣೆಗೆ ಕ್ರಮಕೈಗೊಳ್ಳಲಾಗಿದೆ. ಮುಂಗಾರು ವೇಳೆ ಎಲ್ಲಾ ಅಗತ್ಯ ಕೈಗೊಳ್ಳಲು ಸೂಚಿಸಲಾಗಿದೆ.
ನಾಳೆ ಮಹಾರಾಷ್ಟ್ರದ ನೀರಾವರಿ ಸಚಿವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅವರೊಂದಿಗೆ ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸಲಾಗುವುದು. ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಜೊತೆ ಸಭೆ ನಡೆಸಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದರು.


ಕೋವಿಡ್ ಪರಿಸ್ಥಿತಿ ಸುಧಾರಣೆಯಾಗುತ್ತಿದ್ದು, ಮುಂದೆ ಬರಲಿದೆ ಎನ್ನಲಾದ ಕೋವಿಡ್ ಮೂರನೇ ಅಲೆ ಎದುರಿಸಲು ಸಿದ್ಧತೆ ನಡೆಸಲಾಗಿದೆ. ನಾಳೆ ಸಂಜೆ ನಡೆಯುವ ಸಭೆಯಲ್ಲಿ ಲಾಕ್ ಡೌನ್ ಸಡಿಲಿಕೆಯ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಶಾಸಕ ಅರವಿಂದ ಬೆಲ್ಲದ್ ಅವರು ಮಾಡಿರುವ ಫೋನ್ ಟ್ಯಾಪಿಂಗ್ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ ಎಂದರು.

Join Whatsapp
Exit mobile version