ರೆಡ್ ಅಲಟ್೯ ಘೋಷಿತ ಜಿಲ್ಲೆಗಳಲ್ಲಿ ಸರ್ಕಾರ ಸಕಲ ಸಿದ್ದತೆ ಮಾಡಿಕೊಂಡಿದೆ: ಸಚಿವ ಆರ್. ಅಶೋಕ್

Prasthutha|

ಮಂಗಳೂರು: ರೆಡ್ ಅಲರ್ಟ್ ಘೋಷಿತ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಆರು ಜಿಲ್ಲೆಗಳಲ್ಲಿ ಸರ್ಕಾರದಿಂದ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

- Advertisement -

ಇಂದು ಸಂಜೆ ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಶೋಕ್,
ಜಿಲ್ಲೆಯಲ್ಲಿ ಮುಂದೆ ಕಡಲ್ಕೊರೆತ ಆಗದಂತೆ ಕೈಗೊಳ್ಳಬೇಕಾದ ಶಾಶ್ವತ ಪರಿಹಾರ ಕಾರ್ಯಗಳ ಬಗ್ಗೆ ಜಿಲ್ಲೆಯ ಎಲ್ಲಾ ಶಾಸಕರೊಂದಿಗೆ ಮುಖ್ಯಮಂತ್ರಿಗಳ ಜತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮಳೆ ಹಾಗೂ ಪ್ರವಾಹದಿಂದಾಗಿ ಮನೆ ಸಂಪೂರ್ಣವಾಗಿ ಹಾನಿಯಾದರೆ ಐದು ಲಕ್ಷ ರೂ.ಗಳು, ಶೇ.50 ರಷ್ಟು ಜಖಂ ಆದಲ್ಲೀ 3 ಲಕ್ಷ, ಬಾಗಶಃ ಹಾನಿಯಾದರೆ ಐವತ್ತು ಸಾವಿರ ಹಾಗೂ ಮನೆಗೆ ನೀರು ನುಗ್ಗಿದರೆ ಹತ್ತು ಸಾವಿರ‌ ರೂ.ಗಳ ಪರಿಹಾರ ನೀಡಲಾಗುವುದು ಎಂದು‌ ಘೋಷಿಸಿದ್ದಾರೆ.

- Advertisement -

ರಸ್ತೆ ಸಂಚಾರಕ್ಕೆ ತಡೆಯಾದಲ್ಲಿ ಕೂಡಲೇ ತೆರವುಗೊಳಿಸುವ ಕೆಲಸ ಮಾಡಬೇಕು. ಅದಕ್ಕೆ ಬೇಕಾದ ಜೆಸಿಬಿ ಸೇರಿದಂತೆ ಅಗತ್ಯ ಉಪಕರಣಗಳನ್ನು ಸಿದ್ದಪಡಿಸಬೇಕು. ಅಗ್ನಿಶಾಮಕ ದಳಕ್ಕೆ ಪ್ರತಿಯೊಂದು ತಾಲೂಕಿನಲ್ಲೂ ಪ್ರವಾಹ ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸಲು ಬೋಟ್ ,ಟಾರ್ಚ್, ಅಗತ್ಯ ಉಪಕರಣ ಖರೀದಿಸಲು ಅನುದಾನ ನೀಡಲಾಗುವುದು. ತೆರೆಯಲಾಗುವ ಕಾಳಜಿ ಕೇಂದ್ರದಲ್ಲಿ ರುಚಿಕರ ಊಟ, ಉಪಹಾರ ನೀಡಬೇಕು. ಹೋಟೆಲ್ ನಂತೆಯೇ ನೀಡಬೇಕು, ಅದರಂತೆ ಹಾಸಿಗೆ , ಹೊದಿಕೆಗಳನ್ನು ನೀಡಬೇಕು ಎಂದು ಹೇಳಿದ್ದಾರೆ.

ಇಂತಹ ಸಂದರ್ಭಗಳಲ್ಲಿ ಅಧಿಕಾರಿಗಳು ರಜೆ ಪಡೆಯದೆ
ಜನರ ಕೆಲಸ ಮಾಡಬೇಕು ಎಂದು ಆದೇಶಿಸಿದ್ದಾರೆ.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.
ಸುನಿಲ್ ಕುಮಾರ್ ಅವರು ಮಾತನಾಡಿ, ರಾತ್ರಿಯ ಮಳೆ ಹಾಗೂ ಹವಾಮಾನ ಪರಿಸ್ಥಿತಿ ಪರಿಶೀಲಿಸಿ ಶಾಲಾ – ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದರು.

ಶಾಸಕರಾದ ವೇದವ್ಯಾಸ್ ಕಾಮತ್, ರಾಜೇಶ್ ನಾಯಕ್, ಯು.ಟಿ. ಖಾದರ್, ಹರೀಶ್ ಪೂಂಜ, ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಸ್ಮಾರ್ಟ್ ಸಿಟಿ ಎಂ.ಡಿ ಪ್ರಶಾಂತ್ ಮಿಶ್ರ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ,ನಗರ ಪೋಲಿಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ ಸಭೆಯಲ್ಲಿ‌ ಉಪಸ್ಥಿತರಿದ್ದರು.

Join Whatsapp