ಮಂಗಳೂರು: ಹಿಜಾಬ್ ಕಾರಣದಿಂದ ಹಳೆಯಂಗಡಿಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 19 ವಿದ್ಯಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗಿದ್ದಾರೆ.
ಕರಾವಳಿಯಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರವಾಗಿ ಗೊಂದಲ ಏರ್ಪಟ್ಟಿದ್ದರೂ ಹಳೆಯಂಗಡಿ ಪದವಿ ಕಾಲೇಜಿನಲ್ಲಿ ಯಾವುದೇ ಸಮಸ್ಯೆ ಉಂಟಾಗಿರಲಿಲ್ಲ. ಆದರೆ ಇತ್ತೀಚೆಗೆ ಹೈಕೋರ್ಟ್ ಆದೇಶದ ಕಾರಣ ಮುಂದಿಟ್ಟು ಹಿಜಾಬ್ ಧಾರಿ ವಿದ್ಯಾರ್ಥಿನಿಯರು ತರಗತಿಗೆ ಪ್ರವೇಶಿಸುವುದಕ್ಕೆ ಅವಕಾಶ ನಿರಾಕರಿಸಲಾಗಿದೆ. ಆ ಮೂಲಕ ಪ್ರಾಂಶುಪಾಲರು ಯಾರದೋ ಒತ್ತಡಕ್ಕೆ ಮಣಿದು ತಮ್ಮ ಶೈಕ್ಷಣಿಕ ಜೀವನಕ್ಕೆ ಕೊಳ್ಳಿ ಇಟ್ಟಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.
ನಮ್ಮ ಕಾಲೇಜಿನಲ್ಲಿ ಹಿಜಾಬ್ ವಿಚಾರವಾಗಿ ಯಾವುದೇ ಗೊಂದಲ ಉಂಟಾಗಿರಲಿಲ್ಲ. ಆದರೆ ಇತ್ತೀಚೆಗೆ ಪ್ರಾಂಶುಪಾಲರು ಹಿಜಾಬ್ ಧರಿಸಿ ಬರುವುದಾದರೆ ಕಾಲೇಜಿಗೆ ಪ್ರವೇಶವಿಲ್ಲ ಎಂದು ಹೇಳಿದ್ದರು. ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಪರೀಕ್ಷೆ ಬರೆಯಲೂ ಅವಕಾಶ ನಿರಾಕರಿಸಿದ್ದಾರೆ ಎಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ.