ಬೆಂಗಳೂರು: ಕೊರೊನಾ ವೈರಸ್ ನ ಜೆಎನ್ 1 ಉಪ ತಳಿಯ ಒಟ್ಟು 20 ಸೋಂಕು ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿವೆ. ಕರ್ನಾಟಕದಲ್ಲಿ ಕೋವಿಡ್ ಸೋಂಕಿನಿಂದಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.
ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಮಾಂಡವೀಯ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದು, ಅದರಲ್ಲಿ ಗುಂಡೂರಾವ್ ಭಾಗವಹಿಸಿದ್ದಾರೆ. ಸಭೆಯ ನಂತರ ವಿಕಾಸ ಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ನಿನ್ನೆ ಕೊರೊನಾ ವೈರಸ್ ಸೋಂಕಿಗೆ 64 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪಡೆದಿದೆ. JN.1 ವೈರಸ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಡಿದೆ. ದೇಶದಲ್ಲಿ 20 JN.1 ಪ್ರಕರಣಗಳು ಪತ್ತೆಯಾಗಿವೆ. ಗೋವಾದಲ್ಲಿ 18, ಮಹಾರಾಷ್ಟ್ರದಲ್ಲಿ 1, ಕೇರಳದಲ್ಲಿ 1 ಕೇಸ್ ಪತ್ತೆಯಾಗಿದೆ ಎಂದು ಗುಂಡೂರಾವ್ ಮಾಹಿತಿ ನೀಡಿದರು.