ಹೊಸದಿಲ್ಲಿ: 2002ರ ಗುಜರಾತ್ ಹತ್ಯಾಕಾಂಡ ಪ್ರಕರಣದಲ್ಲಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿದಂತೆ 64 ಮಂದಿಗೆ ವಿಶೇಷ ತನಿಖಾ ತಂಡ (SIT) ಕ್ಲೀನ್ ಚಿಟ್ ನೀಡಿದ ಅಂತಿಮ ವರದಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ವರದಿ ಸ್ವೀಕರಿಸುವಾಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ ಸಮರ್ಥನೆ ಮತ್ತು ಆದೇಶವನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
2002 ಫೆಬ್ರವರಿ 28ರಂದು ಗುಜರಾತ್ ಗಲಭೆಯಲ್ಲಿ ಕೊಲ್ಲಲ್ಪಟ್ಟ ಕಾಂಗ್ರೆಸ್ ನಾಯಕ ಇಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ಗುಜರಾತ್ ಹತ್ಯಾಕಾಂಡದ ಮರು ತನಿಖೆಗೆ ಕೋರಿ ಝಕಿಯಾ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಮೋದಿ ಮತ್ತು ಇತರರನ್ನು ದೋಷಮುಕ್ತಗೊಳಿಸಿರುವುದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.
ನರೇಂದ್ರ ಮೋದಿ ಸೇರಿದಂತೆ 64 ಮಂದಿಯನ್ನು ವಿಚಾರಣೆಗೆ ಒಳಪಡಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು 2012 ಫೆಬ್ರವರಿ 8ರಂದು ತನಿಖಾ ತಂಡವು ಪ್ರಕರಣವನ್ನು ಮುಕ್ತಾಯಗೊಳಿಸುವ ವರದಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ನೀಡಿತ್ತು.