ಬೆಂಗಳೂರು; ದಾವೋಸ್ ನಲ್ಲಿ ನಾಳೆಯಿಂದ ಇದೇ 26ರ ವರೆಗೆ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ ಸಮಾವೇಶದಲ್ಲಿ ತಾವು ಪಾಲ್ಗೊಳ್ಳುತ್ತಿದ್ದು, ನಾಳೆ ಬೆಳಿಗ್ಗೆ 10 ಗಂಟೆಗೆ ದಾವೋಸ್‌ಗೆ ಪ್ರಯಾಣ ಬೆಳೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತಿಂಗಳ 26ರಂದು ತಾವು ವಿದೇಶಿ ಪ್ರವಾಸದಿಂದ ವಾಪಸ್ಸಾಗಲಿದ್ದೇನೆ. 3 ದಿನಗಳ ಕಾಲ ನಡೆಯಲಿರುವ ವಿವಿಧ ಅಧಿವೇಶಗಳಲ್ಲಿ ತಾವು ಭಾಗವಹಿಸುತ್ತಿದ್ದು, 2 ಪ್ರಮುಖ ಕಾರ್ಯಕ್ರಮಗಳಲ್ಲಿ ಕರ್ನಾಟಕದ ಪರಿಸ್ಥಿತಿ ಹೂಡಿಕೆಗೆ ಇರುವ ಅವಕಾಶಗಳು ಮತ್ತಿತರ ವಿಷಯಗಳ ಬಗ್ಗೆ ಪ್ರಸ್ತಾಪಿಸುವುದಾಗಿ ತಿಳಿಸಿದರು.
ವಿಶ್ವ ಆರ್ಥಿಕ ವೇದಿಕೆಯಲ್ಲಿ ಕರ್ನಾಟಕದ ಪೆವಿಲಿಯನ್ ಇದ್ದು, ಬಂಡವಾಳ ಆಕರ್ಷಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. 16 ಮಂದಿ ಜಾಗತಿಕ ಉದ್ಯಮಿಗಳ ಜೊತೆಗೆ ಸಮಾಲೋಚನೆ ನಡೆಸಲಾಗುವುದು. ನವೆಂಬರ್ ನಲ್ಲಿ ಇನ್ವೆಸ್ಟ್ ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲಾಗುತ್ತಿದೆ. ಕೈಗಾರಿಕೆ, ಮಾಹಿತಿ, ತಂತ್ರಜ್ಞಾನ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಗಳು ನಿಯೋಗದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರು.
ವಿಧಾನ ಪರಿಷತ್ ಮತ್ತು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಪಕ್ಷದ ವರಿಷ್ಠರು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಬಿಜೆಪಿ ಸಂಸದೀಯ ಸಮಿತಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ದಾವೋಸ್‌ಗೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಭಾರತೀಯ ನಿಯೋಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವೀಯ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ ದೀಪ್ ಸಿಂಗ್ ಪುರಿ ಹಾಗೂ ಕರ್ನಾಟಕ, ಮಧ್ಯಪ್ರದೇಶ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ, ಮತ್ತು ತೆಲಂಗಾಣ ಈ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಇನ್ನಿತರೆ ಹಿರಿಯ ಸಚಿವರು ಪಾಲ್ಗೊಳ್ಳಲಿದ್ದಾರೆ.