ಲಕ್ನೋ: ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಉತ್ತರ ಪ್ರದೇಶದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಚುನಾವಣೆಯಲ್ಲಿ ಹಣಿಯಬೇಕಾದ ತಂತ್ರಗಳ ಕುರಿತು ಎಲ್ಲಾ ಪಕ್ಷಗಳು ತಮ್ಮದೇ ಆದ ಲೆಕ್ಕಾಚಾರದಲ್ಲಿ ತೊಡಗಿವೆ.
ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳ ಪೈಕಿ 100 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದ್-ಉಲ್-ಮುಸ್ಲಿಮೀನ್ AIMIM ಮುಖ್ಯಸ್ಥ ಅಸದುದ್ದೀನ್ ಉವೈಸಿ ಘೋಷಿಸಿದ್ದಾರೆ.
ಲಕ್ನೋದಲ್ಲಿ ಮಾತನಾಡಿದ AIMIM ಮುಖ್ಯಸ್ಥ ಮುಖ್ಯಸ್ಥ ಅಸದುದ್ದೀನ್ , “ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವು 100 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದೇವೆ. ಮೈತ್ರಿ ಕುರಿತು ಒಂದೆರಡು ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ AIMIM ಅಸ್ತಿತ್ವವು ತುಂಬಾ ಪ್ರಬಲವಾಗಿದೆ. ನಾವು ಚುನಾವಣೆಯಲ್ಲಿ ಗೆಲ್ಲುವ ಸ್ಥಿತಿಯಲ್ಲಿದ್ದೇವೆ. ಇನ್ಶಾ ಅಲ್ಲಾ,” ಮೈತ್ರಿಯ ಕುರಿತು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಉವೈಸಿ ತಿಳಿಸಿದ್ದಾರೆ.
ಈ ನಡುವೆ ರಾಷ್ಟ್ರೀಯ ಲೋಕದಳ RLD ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿದೆ. ಈ ಬಗ್ಗೆ ಮಾತನಾಡಿದ RLD ಅಧ್ಯಕ್ಷ ಜಯಂತ್ ಚೌಧರಿ, “ಈ ತಿಂಗಳ ಅಂತ್ಯದ ವೇಳೆಗೆ ನಾವು ಆರ್ ಎಲ್ ಡಿ ಮತ್ತು ಸಮಾಜವಾದಿ ಪಕ್ಷದ ಮೈತ್ರಿಯ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಳ್ಳುತ್ತೇವೆ. ನಾವು ಒಗ್ಗೂಡುತ್ತೇವೆ,” ಎಂದು ಹೇಳಿದರು.
ಉತ್ತರ ಪ್ರದೇಶದಲ್ಲಿ ಒಟ್ಟು 403 ವಿಧಾನಸಭಾ ಕ್ಷೇತ್ರಗಳು ಇದ್ದು, 2017ರ ಚುನಾವಣೆಯಲ್ಲಿ ಬಿಜೆಪಿಯು ಒಟ್ಟು 312 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಅಧಿಕಾರಕ್ಕೇರಿತ್ತು. 2017ರ ಚುನಾವಣೆಯಲ್ಲಿ ಬಿಜೆಪಿ ಶೇಕಡಾ 40 ರಷ್ಟು ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿತ್ತು.
ಈ ಬಾರಿ SP ಚುನಾವಣಾ ಓಟದಲ್ಲಿ ಕೊಂಚ ವೇಗ ಪಡೆಯುವ ಸಾಧ್ಯತೆ ಇದೆ. ಬಿಜೆಪಿ ಕೆಲವು ಸ್ಥಾನಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಚುಣಾವಣಾಪೂರ್ವ ಸಮೀಕ್ಷೆಗಳು ಭವಿಷ್ಯ ನುಡಿದಿದೆ. ಮತ್ತೊಂದೆಡೆ ಕಾಂಗ್ರೆಸ್ ಕಳೆದ ಬಾರಿಯಂತೆ ಈ ಬಾರಿಯೂ ಚಿಗುರೊಡೆಯುವ ಸಾಧ್ಯತೆ ಇಲ್ಲ ಎಂದು ಟೈಮ್ಸ್ ನೌ ಸಮೀಕ್ಷೆ ಹೇಳಿದೆ.