ತುಮಕೂರು: ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ನಂತರ ಮೂವರು ಮಹಿಳೆಯರು ಮೃತಪಟ್ಟ ಪ್ರಕರಣದಲ್ಲಿ ಸ್ತ್ರೀರೋಗ ತಜ್ಞೆ ಹಾಗೂ ಇಬ್ಬರು ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿ ಮಂಗಳವಾರ ಆದೇಶಿಸಲಾಗಿದೆ.
ಡಾ.ಪೂಜ, ಶುಶ್ರೂಷಣಾಧಿಕಾರಿ ಜಿ.ಪದ್ಮಾವತಿ ಹಾಗೂ ಶಸ್ತ್ರ ಚಿಕಿತ್ಸಾ ವಿಭಾಗದ ತಜ್ಞ ಸಿಬ್ಬಂದಿ ಬಿ.ಆರ್.ಕಿರಣ್ ಅವರನ್ನು ವಜಾ ಮಾಡಲಾಗಿದೆ.
ಶಸ್ತ್ರ ಚಿಕಿತ್ಸೆಯ ನಂತರ ಸೋಂಕು ಹರಡಿ ಮಹಿಳೆಯರು ಸಾವನ್ನಪ್ಪಿರುವುದು ಮೇಲು ನೋಟಕ್ಕೆ ಕಂಡು ಬಂದಿದೆ. ಶಸ್ತ್ರ ಚಿಕಿತ್ಸಾ ಪ್ರಕ್ರಿಯೆಯಲ್ಲಿ ಲೋಪ ಕಂಡು ಬಂದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್ ತನಿಖೆ ನಡೆಸಿ ವರದಿ ಸಲ್ಲಿಸಿದ್ದಾರೆ.