ಬೆಂಗಳೂರು: ರಾಜ್ಯದ ಪದವಿ ಪೂರ್ವ ಕಾಲೇಜುಗಳಿಗೆ 3708 ಅತಿಥಿ ಉಪನ್ಯಾಸಕರನ್ನು ಗೌರವಧನದ ಆಧಾರದ ಮೇಲೆ ನೇಮಿಸಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈವರೆಗೂ ಕೇವಲ 9 ಸಾವಿರ ರೂ. ನೀಡುತ್ತಿದ್ದ ಗೌರವ ಧನವನ್ನು ಮಾಸಿಕ 12 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ‘ಪರಿಷ್ಕರಣೆ’ ಮಾಡಲಾಗಿದ್ದು, 9,000 ದಿಂದ 12,000 ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕರ ಕೊರತೆ ನೀಗಿಸಲು ‘3,708 ಅತಿಥಿ ಉಪನ್ಯಾಸಕ’ರ ಸೇವೆಯನ್ನು ಪಡೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ 3708 ಅತಿಥಿ ಉಪನ್ಯಾಸಕರ ಹುದ್ದೆಗಳು ಖಾಲಿಯಿದ್ದು, 2016ರ ಸುತ್ತೋಲೆಯ ಷರತ್ತುಗಳಿಗೆ ಒಳಪಟ್ಟು ಮಾಸಿಕ 12 ಸಾವಿರ ರೂ. ಗೌರವ ಧನ ನಿಗದಿ ಮಾಡಲಾಗಿದೆ.