ಬೆಂಗಳೂರು: ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಬೆಂಗಳೂರು ವಿಭಾಗದ 9 ಜಿಲ್ಲೆಗಳ 54 ಸಹಕಾರಿಗಳಿಗೆ ‘ಸಹಕಾರ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಹಮ್ಮಿಕೊಂಡಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಯಕ್ರಮ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿದರು.
ಇದೇ ವೇಳೆ ಯಶಸ್ವಿನಿ ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಿಸಲಾಯಿತು. ಬಳಿಕ ಸಹಕಾರ ಪತ್ರಿಕೆ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು, ಸಹಕಾರ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಹಕಾರ ಕ್ಷೇತ್ರದಲ್ಲಿ ಉತ್ತಮ ಕಾರ್ಯ ಮಾಡುತ್ತಿದ್ದಾರೆ ಎಂದರು.
ಸಹಕಾರ ಕ್ಷೇತ್ರ ಬಹಳ ದೊಡ್ಡ ಕ್ಷೇತ್ರ. ಸಹಕಾರಿ ರತ್ನ ಪ್ರಶಸ್ತಿ ಪಡೆದ ಹಿರಿಯರು, ಸಹಕಾರಿ ಕ್ಷೇತ್ರದ ಏಳಿಗೆಗೆ ಅಪಾರವಾಗಿ ಶ್ರಮಿಸಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿನ ಸವಾಲುಗಳನ್ನು ಮೆಟ್ಟಿನಿಂತು ಜನಜೀವನಕ್ಕೆ ಬೇಕಾದ ಕೊಡುಗೆಗಳನ್ನು ಕೊಡಲು ಸಹಕಾರಿ ಸಪ್ತಾಹ ಕಾರ್ಯಕ್ರಮ ಸಹಕಾರಿಯಾಗಲಿ ಎಂದರು.
ಸಹಕಾರಿ ಸಂಘಗಳಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ, ರಾಜ್ಯದ 6 ಸಾವಿರಕ್ಕಿಂತ ಹೆಚ್ಚು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ, ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ, ಯಶಸ್ವಿನಿ ಯೋಜನೆ ಮರುಜಾರಿ, 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ. ಸಾಲ ವಿತರಣೆಗೆ ಸೋಮಶೇಖರ್ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮಾತನಾಡಿ, ನ.14 ರಿಂದ 20ರವರೆಗೆ ಪ್ರತಿ ವರ್ಷ ಏಳು ದಿನಗಳ ಕಾಲ ಸಹಕಾರ ಸಪ್ತಾಹ ಆಚರಣೆ ಮಾಡಲಾಗುತ್ತದೆ. 20 ವರ್ಷಕ್ಕೂ ಹೆಚ್ಚು ಕಾಲದಿಂದ ಸಹಕಾರ ಸಪ್ತಾಹ ಮಾಡಿಕೊಂಡು ಬಂದಿದ್ದೇನೆ. ಸಹಕಾರ ಮಹಾಮಂಡಳ ಮಾತೃ ಸಂಸ್ಥೆಯಾಗಿ ಕೆಲಸ ಮಾಡುತ್ತಿದೆ. ಸಹಕಾರಿ ಕ್ಷೇತ್ರವನ್ನು ಮುನ್ನಡೆಸುವಲ್ಲಿ ಜಿ.ಟಿ. ದೇವೇಗೌಡ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ಹಾಲು ಪೂರೈಸುವ ರೈತರಿಗೆ ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಮುಖಾಂತರ
ಸಾಲಸೌಲಭ್ಯ ಕಲ್ಪಿಸಲಾಗುವುದು. ಕ್ಷೇತ್ರದ ಜನತೆಯ ಪ್ರೀತಿ, ವಿಶ್ವಾಸದಿಂದ ಶಾಸಕರಾಗಿ ಆಯ್ಕೆಯಾಗಿ, ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮೈಸೂರು ಉಸ್ತುವಾರಿ ಸಚಿವರಾಗಿ ಯಶಸ್ವಿಯಾಗಿ ದಸರಾ ಆಚರಣೆ ಮಾಡಲಾಯಿತು. ಸರ್ಕಾರ, ಪಕ್ಷಕ್ಕೆ ಮುಜಗರವಾಗದಂತೆ ಕೆಲಸ ಮಾಡಿದ್ದೇನೆ. ಯಶವಂತಪುರ ಜನತೆಯ ಪ್ರೀತಿ ವಿಶ್ವಾಸ ಉಳಿಸಿಕೊಂಡಿದ್ದೇನೆ. ದ್ವೇಷದ ರಾಜಕಾರಣ ಮಾಡಿಲ್ಲ, ಮಾಡುವುದಿಲ್ಲ ಎಂದರು.
ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ. ದೇವೇಗೌಡ ಮಾತನಾಡಿದರು.