ಆಗಸ್ಟ್ 23ರಿಂದ 9, 10 ಮತ್ತು ಪಿಯುಸಿ ತರಗತಿ ಪ್ರಾರಂಭ; ಸಿಎಂ ಬೊಮ್ಮಾಯಿ

Prasthutha|

ಬೆಂಗಳೂರು: ರಾಜ್ಯದಲ್ಲಿ 9, 10 ಹಾಗೂ ಪಿಯುಸಿ ತರಗತಿಗಳನ್ನು ಆಗಸ್ಟ್ 23 ರಿಂದ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಯಿತು.

- Advertisement -

ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸಿ ವಿಸ್ತೃತವಾಗಿ ಚರ್ಚಿಸಿದರು.

ಸಭೆಯಲ್ಲಿ ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು ಪ್ರಾರಂಭಿಸಲು ಹಾಗೂ ರಾಜ್ಯದ ಕೋವಿಡ್ ಸ್ಥಿತಿಗತಿಯನ್ನು ಆಧರಿಸಿ, ಪ್ರಾಥಮಿಕ ಶಾಲೆ ಮತ್ತು 8ನೇ ತರಗತಿ ಪ್ರಾರಂಭಿಸುವ ಬಗ್ಗೆ ಆಗಸ್ಟ್ ತಿಂಗಳ ಅಂತ್ಯದಲ್ಲಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.

- Advertisement -

ವಿದ್ಯಾರ್ಥಿಗಳಿಗೆ ದಿನ ಬಿಟ್ಟು ದಿನ ತರಗತಿ ನಡೆಸಲು ನಿರ್ಧರಿಸಿದ್ದು, ಶಾಲೆ ಕಾಲೇಜುಗಳನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತ ತಿಳಿಸಿದರು.

ಕೇರಳ ಹಾಗೂ ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನಿಸಲಾಗಿದ್ದು, ರಾತ್ರಿ ಕರ್ಫ್ಯೂ ರಾತ್ರಿ 10ರ ಬದಲು 9ರಿಂದ ಜಾರಿಗೊಳಿಸಲು ನಿರ್ಧರಿಸಲಾಯಿತು. ರಾತ್ರಿ ಕರ್ಫ್ಯೂ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ, ಡಾ. ಕೆ. ಸುಧಾಕರ್, ತಜ್ಞರಾದ ಡಾ. ಸಿ.ಎನ್. ಮಂಜುನಾಥ್, ಡಾ. ದೇವಿಪ್ರಸಾದ್ ಶೆಟ್ಟಿ, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Join Whatsapp