ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರ ಅಂಕಿತ

Prasthutha|

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲರ ಅಂಕಿತ ಬಿದ್ದಿದೆ. ಇದರೊಂದಿಗೆ ರಾಜ್ಯದಲ್ಲಿ ಈ ಕಾಯ್ದೆ ಅಧಿಕೃತವಾಗಿ ಜಾರಿಯಾದಂತಾಗಿದೆ.

- Advertisement -

ಬಲವಂತದ, ವಂಚನೆ, ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧ ಹೇರಲಾಗಿದೆ. ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹೋದ್ಯೋಗಿಗಳೂ ಮತಾಂತರದ ಬಗ್ಗೆ ದೂರು ನೀಡಬಹುದಾಗಿದೆ.

ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ಇಪ್ಪತ್ತೈದು ಸಾವಿರ ರೂಪಾಯಿಗಳ ದಂಡ ವಸೂಲಾತಿಗೆ ಅವಕಾಶವಿದೆ. ಅಪ್ರಾಪ್ತ ವ್ಯಕ್ತಿ, ಮಹಿಳೆ, ಎಸ್ಸಿ, ಎಸ್ಟಿ ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ ಹತ್ತು ವರ್ಷಗಳ ವರೆಗೆ ಜೈಲು ಶಿಕ್ಷೆಗೆ. ಜೊತೆಗೆ 50 ಸಾವಿರ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ.
ಮತಾಂತರದ ಉದ್ದೇಶದಿಂದ ಆದ ಮದುವೆಯನ್ನು ಅಸಿಂಧುವೆಂದು ಘೋಷಿಸಲು ನ್ಯಾಯಾಲಯಕ್ಕೆ ಅಧಿಕಾರ ನೀಡಲಾಗಿದೆ ಹಾಗೂ ಮತಾಂತರ ಅಪರಾಧ ಜಾಮೀನು ರಹಿತ ಅಪರಾಧ ಎಂದು ವ್ಯಾಖ್ಯಾನಿಸಲಾಗಿದೆ.

- Advertisement -

ಮತಾಂತರವಾಗಲು ಮುಂದಾಗಿರುವ ವ್ಯಕ್ತಿ ಕನಿಷ್ಠ ಮೂವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆ ತಿಳಿಸಬೇಕು. ಹಾಗೂ ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಈ ಬಗ್ಗೆ ಮಾಹಿತಿ ಕೊಡಬೇಕು. ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆ30 ದಿನಗಳ ಒಳಗಾಗಿ ಆಕ್ಷೇಪಣೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಬೇಕು. ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬಂದಲ್ಲಿ ಜಿಲ್ಲಾ ದಂಡಾಧಿಕಾರಿ ಕ್ರಿಮಿನಲ್ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಈ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.



Join Whatsapp