ಅಹಮದಾಬಾದ್: ಮುಂದಿನ ಅಸೆಂಬ್ಲಿ ಚುನಾವಣೆಗೂ ಮುನ್ನ ಅಧಿಕಾರಿಗಳ ವರ್ಗಾವಣೆ ಮತ್ತು ಹುದ್ದೆ ನಿಯೋಜನೆಯ ಕುರಿತ ವರದಿಯನ್ನು ಸಲ್ಲಿಸಲು ಗುಜರಾತ್ ಸರ್ಕಾರದ ಅಧಿಕಾರಿಗಳು ವಿಫಲವಾಗಿದ್ದಾರೆ. ಈ ಕುರಿತು ಕೆಂಡಾಮಂಡಲವಾಗಿರುವ ಚುನಾವಣಾ ಆಯೋಗವು ರಾಜ್ಯದ ಮುಖ್ಯ ಕಾರ್ಯದರ್ಶಿ, ಡಿಜಿಪಿಯಿಂದ ಸ್ಪಷ್ಟನೆ ಕೋರಿದೆ.
ಇದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶರಿಗೆ ಹಲವು ಭಾರೀ ನೆನೆಪಿಸಿದ ಹೊರತಾಗಿಯೂ ಕೆಲವು ವರ್ಗದ ಅಧಿಕಾರಿಗಳ ವರ್ಗಾವಣೆ ಮತ್ತು ಹುದ್ದೆಗೆ ನಿಯೋಜಿಸಲು ಅನುಸರಿಸಬೇಕಾದ ವರದಿಗಳನ್ನು ಸಲ್ಲಿಸಲು ವಿಫಲರಾಗಿದ್ದಾರೆ ಎಂದು ತರಾಟೆಗೆ ತೆಗೆದಿರುವುದಾಗಿ ಮೂಲಗಳಿಂದ ತಿಳಿದುಬಂದಿವೆ.
ಹಿಮಾಚಲ ಪ್ರದೇಶ ಮತ್ತು ಗುಜರಾತ್’ಗೆ ಅಧಿಕಾರಿಗಳ ವರ್ಗಾವಣೆ ಮತ್ತು ಹುದ್ದೆಗೆ ಸಂಬಂಧಿಸಿದ ಪತ್ರಗಳನ್ನು ಕಳುಹಿಸಲಾಗಿದೆ. ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು ಚುನಾವಣೆ ನಡೆಯಲಿದ್ದು, ಗುಜರಾತ್ ಚುನಾವಣೆಯ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ.
ತಮ್ಮ ತವರು ಜಿಲ್ಲೆಗಳಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ಮತ್ತು ಕಳೆದ ನಾಲ್ಕು ವರ್ಷಗಳಿಂದ ಜಿಲ್ಲೆಯಲ್ಲಿ ಮೂರು ವರ್ಷಗಳನ್ನು ಪೂರ್ಣಗೊಳಿಸಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗವು ಎರಡೂ ಸರ್ಕಾರಗಳಿಗೆ ಸೂಚಿಸಿತ್ತು.
ಪಾರದರ್ಶಕ ಮತ್ತು ನ್ಯಾಯಸಮ್ಮತವಾದ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೂ ಮುನ್ನ ಚುನಾವಣಾ ಆಯೋಗವು ಇಂತಹ ನಿರ್ದೇಶನಗಳನ್ನು ನೀಡುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ.