ತಿರುವನಂತಪುರಂ: ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದುಹಾಕುವ ಸುಗ್ರೀವಾಜ್ಞೆಗೆ ಕೇರಳ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಶಿಕ್ಷಣ ಸಚಿವೆ ಆರ್. ಬಿಂದು ತಿಳಿಸಿದ್ದಾರೆ.
ಸುಗ್ರೀವಾಜ್ಞೆ ಹೊರಡಿಸುವ ನಿರ್ಧಾರವನ್ನು ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಮೂಲಗಳು ತಿಳಿಸಿವೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಬಿಂದು, ರಾಜ್ಯದಲ್ಲಿನ ಉನ್ನತ ಶಿಕ್ಷಣ ಮತ್ತು ವಿಶ್ವವಿದ್ಯಾಲಯಗಳ ಸುಧಾರಣೆಗಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು.
ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರು ಸುಗ್ರೀವಾಜ್ಞೆಗೆ ಸಹಿ ಹಾಕುತ್ತಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ ಬಿಂದು, ತಮ್ಮ ಸಾಂವಿಧಾನಿಕ ಕರ್ತವ್ಯಗಳ ಆಧಾರದಲ್ಲಿ ರಾಜ್ಯಪಾಲರು ಕಾರ್ಯನಿರ್ವಹಿಸುತ್ತಾರೆ ಎಂದು ಭಾವಿಸುವುದಾಗಿ ತಿಳಿಸಿದರು.
ರಾಜ್ಯದಲ್ಲಿನ ಎಲ್ಲಾ ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕ ಹಾಗೂ ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ರಾಜಕೀಯ ತಿಕ್ಕಾಟದ ಮಧ್ಯೆ, ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.