ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ ಗುರುವಾರ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.
ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವರಾದ ಮನ್ಸುಖ್ ಮಾಂಡ್ವಿಯಾ, ಭೂಪೇಂದರ್ ಯಾದವ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್.ಪಾಟೀಲ್ ಅವರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಘಾಟ್ಲೋಡಿಯಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರಿಗೆ ಟಿಕೆಟ್ ಸಿಕ್ಕಿದ್ದು, ಅವರು ಜಾಮ್ ನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿದ ಮಾಜಿ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರು ವೀರಮ್ ಗಮ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಗುಜರಾತ್ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ನಡೆಸಿತ್ತು. ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೇಂದ್ರ ಸಚಿವ ಭೂಪೇಂದ್ರ ಯಾದವ್, ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಇತರರು ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆಗೆ ಪಕ್ಷದ ಕೇಂದ್ರ ಕಚೇರಿಗೆ ಆಗಮಿಸಿದ್ದರು.
ರಾಜ್ಯದ 89 ವಿಧಾನಸಭಾ ಸ್ಥಾನಗಳಿಗೆ ಡಿಸೆಂಬರ್ 1 ರಂದು ಮತ್ತು 93 ಸ್ಥಾನಗಳಿಗೆ ಡಿಸೆಂಬರ್ 5 ರಂದು ಮತದಾನ ನಡೆಯಲಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ನವೆಂಬರ್ 14 ಕೊನೆ ದಿನವಾಗಿರಲಿದೆ. ಡಿಸೆಂಬರ್ 5ರಂದು ಮತದಾನ ನಡೆಯಲಿರುವ 93 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ನ. 17 ಕೊನೆಯ ದಿನವಾಗಿದೆ.
ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿಯನ್ನು ಹೊರಹಾಕಲು ಪ್ರಯತ್ನಿಸುತ್ತಿದ್ದರೆ, ಆಮ್ ಆದ್ಮಿ ಪಕ್ಷ (ಎಎಪಿ) ಕೂಡ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಲು ತಯಾರಿ ನಡೆಸುತ್ತಿದೆ.