ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರು ನಗರ, ಬೆಂಗಳೂರು, ಕೇರಳಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ಮಂಗಳೂರು ನಗರ ಸಿಸಿಬಿ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ 137 ಕೆ.ಜಿ.ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮ ತೌಡುಗೋಳಿ ಕ್ರಾಸ್ ನಿವಾಸಿ ರಮೀಝ್ ರಾಝ್ (30) ಹಾಗೂ ಕಾಸರಗೋಡು ಮಂಜೇಶ್ವರ ಮೀಯಪದವು ಮದಂಗಲ್ ಕಟ್ಟೆ ನಿವಾಸಿ ಅಬ್ದುಲ್ ಖಾದರ್ ಹ್ಯಾರಿಸ್ (31) ಬಂಧಿತ ಆರೋಪಿಗಳು.
ನವೆಂಬರ್ 17ರಂದು ಮಂಗಳೂರು ನಗರಕ್ಕೆ ಆಂಧ್ರದಿಂದ ಕಾರಿನಲ್ಲಿ ಮಾದಕ ವಸ್ತು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್’ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್’ಐ ರಾಜೇಂದ್ರ ಬಿ.ನೇತೃತ್ವದ ಸಿಸಿಬಿ ಪೊಲೀಸರು, ಮುಡಿಪು ಕುರ್ನಾಡು ಗ್ರಾಮದ ಕಾಯರ್’ಗೋಳಿ ಎಂಬಲ್ಲಿ ಕಾರು ನಿಲ್ಲಿಸಿ ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆರೋಪಿಗಳಿಂದ 132 ಕೆ.ಜಿ.ಗಾಂಜಾ, 2 ಮೊಬೈಲ್ ಫೋನ್, 3 ತಲವಾರು, 2180 ರೂ.ನಗದು ಸೇರಿ ಒಟ್ಟು 39,15,000 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಆರೋಪಿಗಳ ಪೈಕಿ ರಮೀಝ್ ರಾಝ್ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಒಂದು ಪ್ರಕರಣ, ಗಾಂಜಾ ಮಾರಾಟ ಮಾಡಿದ ಪ್ರಕರಣ, ಹಲ್ಲೆ ಪ್ರಕರಣ ಸೇರಿ ಒಟ್ಟು 3 ಪ್ರಕರಣ ದಾಖಲಾಗಿವೆ. ಅಲ್ಲದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಒಂದು ಪ್ರಕರಣ, ಕೊಲೆಯತ್ನ ಪ್ರಕರಣ ಹಾಗೂ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಮಾರಾಟದ ಒಂದು ಪ್ರಕರಣ ಸೇರಿ ಒಟ್ಟು 6 ಪ್ರಕರಣಗಳು ದಾಖಲಾಗಿವೆ ಎಂದು ಶಶಿಕುಮಾರ್ ವಿವರಿಸಿದರು.
ಇನ್ನೋರ್ವ ಆರೋಪಿ ಅಬ್ದುಲ್ ಖಾದರ್ ಹ್ಯಾರಿಸ್ ವಿರುದ್ಧ ಉಳ್ಳಾಲ ಠಾಣೆಯಲ್ಲಿ 2 ಕೊಲೆಯತ್ನ, ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಹಲ್ಲೆ ಪ್ರಕರಣಗಳು ದಾಖಲಾಗಿವೆ.