ಬೆಂಗಳೂರು: ಮಾಜಿ ಸ್ಪೀಕರ್, ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರನ್ನು ಅವಾಚ್ಯ ಶಬ್ದದಿಂದ ಸಂಬೋಧಿಸಿದ್ದ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ. ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ ಎಂದು ಹೇಳಿದ್ದಾರೆ.
ನಿನ್ನೆಯ ದಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ ಬಹಳ ಬೇಸರವಾಗಿತ್ತು. ಮಕ್ಕಳು 2-3 ವರ್ಷದಿಂದ ಎದುರಿನ ಅಶ್ವತ್ಥಕಟ್ಟೆ ಮೇಲೆ ಪಾಠ ಕೇಳುತ್ತಿದ್ದರು ಎಂದು ಕೇಳಿ ಆಕ್ರೋಶ ಉಂಟಾಗಿತ್ತು.
ಈ ಆಕ್ರೋಶದ ಹಿನ್ನೆಲೆಯಲ್ಲಿ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು, ಯಾರಿಗೂ ಅಪಮಾನ ಮಾಡುವುದಕ್ಕೆ ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ ಎಂದು ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.