ನವದೆಹಲಿ: ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿ ಸಂತ್ರಸ್ತೆ ಬಿಲ್ಕೀಸ್ ಬಾನು ಸಲ್ಲಿಸಿದ್ದ ಅರ್ಜಿಯನ್ನು ಡಿಸೆಂಬರ್ 13ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಶನಿವಾರ ತಿಳಿಸಿದೆ.
ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ಎಂ. ತ್ರಿವೇದಿ ಅವರನ್ನು ಒಳಗೊಂಡ ಪೀಠವು ಬಿಲ್ಕೀಸ್ ಬಾನು ಅವರ ಅರ್ಜಿ ವಿಚಾರಣೆ ನಡೆಸಲಿದೆ.
‘ಅತ್ಯಾಚಾರ ಪ್ರಕರಣದ ಎಲ್ಲಾ 11 ಅಪರಾಧಿಗಳನ್ನು ಅವಧಿಗೆ ಮೊದಲೇ ಬಿಡುಗಡೆ ಮಾಡಲಾಗಿದೆ. ‘ಈ ರೀತಿಯ ಹೇಯ ಕೃತ್ಯ ಎಸಗಿದ ಅಪರಾಧಿಗಳನ್ನು ಬಿಡುಗಡೆ ಮಾಡಿರುವುದು ದೇಶದಲ್ಲಿ ಅಷ್ಟೇ ಅಲ್ಲದೆ ವಿದೇಶಗಳಲ್ಲೂ ಹಲವರಿಗೆ ಆಘಾತವನ್ನುಂಟು ಮಾಡಿತ್ತು’ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
2002ರ ಗುಜರಾತ್ ಹಿಂಸಾಚಾರದ ವೇಳೆ ಬಿಲ್ಕಿಸ್ ಬಾನೊ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು ಮತ್ತು ಅವರ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈಯಲಾಗಿತ್ತು.