ಕಸಾಪ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದೆ ವೈಯಕ್ತಿಕ ಮಾನಹಾನಿಗೆ ಯತ್ನಿಸುತ್ತಿರುವ ಜೋಶಿ: ಪುರುಷೋತ್ತಮ ಬಿಳಿಮಲೆ

Prasthutha|

ಬೆಂಗಳೂರು: ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನ ಪದೇ ಪದೇ ವಿವಾದಗಳಿಗೆ ಕಾರಣವಾಗುತ್ತಿರುವುದಲ್ಲದೆ, ಮುಸ್ಲಿಂ ಸಮುದಾಯಕ್ಕೆ ಆದ್ಯತೆ ನೀಡಿಲ್ಲ ಎಂಬ ಆರೋಪ ವೈಯಕ್ತಿಕ ಮಟ್ಟಕ್ಕೆ ಬಂದು ನಿಂತಿದೆ.

- Advertisement -

ಹಾವೇರಿ ಸಾಹಿತ್ಯ ಸಮ್ಮೇಳನದಲ್ಲಿ ಪೆಂಡಾಲ್ ಹಾಕಲು ಪರಿಚಿತರಾದ ಮುಸ್ಲಿಂ ವ್ಯಾಪಾರಿಯೊಬ್ಬರಿಗೆ ಆರ್ಡರ್ ಕೊಡಿಸದಿದ್ದಕ್ಕೆ ತಮ್ಮನ್ನು ಟೀಕಿಸುತ್ತಿದ್ದಾರೆ ಎಂದು  ಜನ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ದನಿಗೂಡಿಸಿದ್ದ ಹಿರಿಯ ವಿದ್ವಾಂಸ ಪ್ರೊ.ಪುರುಷೋತ್ತಮ ಬಿಳಿಮಲೆ ಅವರ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ವೈಯಕ್ತಿಕ ಆರೋಪ ಮಾಡಿದ್ದರು.

ಈ ಬಗ್ಗೆ ಜೋಶಿಗೆ ಪತ್ರದ ಮೂಲಕ ಪ್ರತಿಕ್ರಿಯಿಸಿರುವ ಬಿಳಿಮಲೆ, ಪೆಂಡಾಲ್ ಬಗ್ಗೆ ಹೇಳಿದ ಮಾತುಗಳು ಅತ್ಯಂತ ಹಾಸ್ಯಾಸ್ಪದವಾದದ್ದು. ಅವರದನ್ನು ಸಾಬೀತು ಪಡಿಸಬೇಕು ಎಂದು ಸವಾಲು ಹಾಕಿದ್ದಾರೆ.

- Advertisement -

ಸಾಬೀತು ಪಡಿಸಲಾಗದಿದ್ದರೆ ಪರಿಷತ್ತಿನ ಅಧ್ಯಕ್ಷ ಪೀಠಕ್ಕೆ ಅವರು ಯೋಗ್ಯರಲ್ಲ ಎಂದೇ ಭಾವಿಸಬೇಕಾಗುತ್ತದೆ. ಸಾರ್ವಜನಿಕ ಸಂಘ ಸಂಸ್ಥೆಗಳ ಜವಾಬ್ದಾರಿ ಹೊತ್ತವರು ಲಜ್ಜೆಗೆಟ್ಟು ಯಾವ ನೀಚ ಮಟ್ಟಕ್ಕೆ ಇಳಿಯಬಹುದು ಎಂಬುದಕ್ಕೆ ಮಹೇಶ್ ಜೋಷಿಯವರ ಮಾತುಗಳೇ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಹೇಶ ಜೋಶಿಯವರು ನನ್ನ ಮೇಲೆ ಮಾಡಿದ ಆರೋಪಗಳನ್ನು ಗಮನಿಸಿದೆ. ಪರಿಷತ್ತಿನ ಕಾರ್ಯ ವಿಧಾನಗಳ ಬಗ್ಗೆ ನಾನು ಅಸಮಾಧಾನ ಸೂಚಿಸಿದ್ದು ನಿಜ. ಹಾವೇರಿ ಸಮ್ಮೇಳನದಲ್ಲಿ ಎಲ್ಲ ವರ್ಗಗಳಿಗೆ ಸರಿಯಾದ ಪ್ರಾತಿನಿಧ್ಯ ದೊರಕಿಲ್ಲ ಎಂಬ ಅನೇಕರ ಮಾತಿಗೆ ನಾನೂ ದನಿಗೂಡಿಸಿದ್ದೇನೆ. ಇದು ಪ್ರಜಾಪ್ರಭುತ್ವ ನನಗೆ ತಂದುಕೊಟ್ಟ ಹಕ್ಕು, ಮತ್ತು ಹೀಗೆ ಬರೆಯುವುದು ನನ್ನ ಕರ್ತವ್ಯ ಎಂದು ನಾನು ನಂಬಿದ್ದೇನೆ  ಎಂದು ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಇದರ ಹೊರತಾಗಿ ನಾನು ಜೋಶಿಯವರ ಸಹಿತವಾಗಿ ಯಾರ ವೈಯಕ್ತಿಕ ವಿಚಾರಗಳ ಬಗ್ಗೆಯೂ ಬರೆದಿಲ್ಲ. ಅವರು ಹಾವೇರಿ ಸಮ್ಮೇಳನಕ್ಕೆ ನನ್ನನ್ನು ಕರೆದಿದ್ದರು. ನನ್ನದೇ ಕಾರಣಗಳಿಗಾಗಿ ಬರಲಾಗುವುದಿಲ್ಲ ಎಂದು ಹೇಳಿದ್ದೇನೆ. ಅದಕ್ಕೆ ಅವರು ಇಷ್ಟೊಂದು ಆರೋಪಗಳನ್ನು ಮಾಡುವ ಅಗತ್ಯ ಇರಲಿಲ್ಲ” ಎಂದಿದ್ದಾರೆ.

ನಾನು ಮತ್ತು ನನ್ನಂಥ ಹಲವರು ಪರಿಷತ್ತಿನ ಬಗ್ಗೆ ಎತ್ತಿದ ಪ್ರಶ್ನೆಗಳಿಗೆ ಉತ್ತರ ಕೊಡಲು ಗೊತ್ತಿಲ್ಲದ ಜೋಶಿಯವರು ವೈಯಕ್ತಿಕವಾಗಿ ಮಾನಹಾನಿಯಾಗುವಂಥ ಮಾತುಗಳನ್ನು ಆಡಿದ್ದಾರೆ. ಈ ಮಾತುಗಳ ಮೂಲಕ ಅವರು ಸಾಹಿತ್ಯ ಪರಿಷತ್ತು ಇವತ್ತು ಎಂಥವರ ಕೈಯಲ್ಲಿದೆ ಎಂಬುದನ್ನು ಮತ್ತೆ ಸಾರ್ವಜನಿಕರಿಗೆ ತಿಳಿಯಪಡಿಸಿದ್ದಾರೆ. ಇಂಥದ್ದರ ವಿರುದ್ಧವಾಗಿ ಪ್ರತ್ಯೇಕ ಸಮ್ಮೇಳನಗಳನ್ನು ಸಂಘಟಿಸಿಕೊಳ್ಳಬೇಕಾದ್ದು ಇವತ್ತಿನ ತುರ್ತು ಅಗತ್ಯ ಎಂದು ಮತ್ತೊಮ್ಮೆ ಜನ ಸಾಹಿತ್ಯ ಸಮ್ಮೇಳನದ ತುರ್ತಿನ ಬಗ್ಗೆ ಮಾತನಾಡಿದ್ದಾರೆ.



Join Whatsapp