ಚೆನ್ನೈ: ಕೆಎಸ್’ಆರ್’ಟಿಸಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡು ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ತಮಿಳುನಾಡಿನ ಕೃಷ್ಣಗಿರಿಯ ಗುರುಪರಪಲ್ಲಿ ಬಳಿ ನಡೆದಿದೆ.
ಗುರುಪರಪಲ್ಲಿಯ ಒಟ್ಟೆರ್ ಗ್ರಾಮ ನಿವಾಸಿಗಳಾದ ಯೋಧ ಸುಂದರೇಶನ್ ಹಾಗೂ ರೈತ ಗಣೇಶನ್ ಮೃತಪಟ್ಟವರು. ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಇಬ್ಬರೂ ಬೈಕ್ ನಲ್ಲಿ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ಬೆಂಗಳೂರಿನಿಂದ ತಿರುಕೋವಿಲೂರು ಮಾರ್ಗವಾಗಿ ಬರುತ್ತಿದ್ದ ಕೆಎಸ್’ಆರ್’ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಇಬ್ಬರೂ ಬಸ್ಸಿನ ಅಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಸ್ಸಿನ ಅಡಿ ಸಿಲುಕಿದ್ದ ದ್ವಿಚಕ್ರ ವಾಹನಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ವೇಗವಾಗಿ ಹರಡಿ ಕೆಎಸ್’ಆರ್’ಟಿಸಿ ಬಸ್ಸಿಗೆ ವ್ಯಾಪಿಸಿದೆ. ಬಸ್’ನಲ್ಲಿದ್ದ ಸುಮಾರು 60ಕ್ಕೂ ಹೆಚ್ಚು ಪ್ರಯಾಣಿಕರು ಕೆಳಗಿಳಿದು ಪ್ರಾಣ ಉಳಿಸಿಕೊಂಡಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ಆರಿಸುವಷ್ಟರಲ್ಲಿ ಬಸ್ಸು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅಪಘಾತದಲ್ಲಿ ಮೃತಪಟ್ಟ ಇಬ್ಬರ ಮೃತದೇಹಗಳನ್ನು ಪೊಲೀಸರು ಹೊರತೆಗೆದು ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಯ ಕುರಿತು ಗುರುಪರಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅವಘಡದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.