ಹೊಸದಿಲ್ಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಜಾಕ್ಕೆ ಆಗ್ರಹಿಸಿ ಜಂತರ್ ಮಂತರ್ ನಲ್ಲಿ ನಡೆಸುತ್ತಿರುವ ಪ್ರತಿಭಟನಾ ವೇದಿಕೆಗೆ ಆಗಮಿಸಿದ್ದ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್ ಅವರನ್ನು ಕುಸ್ತಿಪಟುಗಳು ವೇದಿಕೆಯಿಂದ ಕೆಳಗಿಳಿಸಿರುವ ಘಟನೆ ಗುರುವಾರ ನಡೆದಿದೆ.
ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಪ್ರತಿಭಟನಾ ವೇದಿಕೆಯಲ್ಲಿದ್ದ ಬೃಂದಾ ಕಾರಟ್ ಅವರ ಬಳಿ ಕುಸ್ತಿಪಟುಗಳು ದಯವಿಟ್ಟು ವೇದಿಕೆಯಿಂದ ಕೆಳಗಿಳಿಯಿರಿ ಎಂದು ವಿನಂತಿಸಿದ್ದಾರೆ.
ಬಿಜೆಪಿ ಸಂಸದರೂ ಆಗಿರುವ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಸರ್ವಾಧಿಕಾರಿ ಧೋರಣೆ ವಿರುದ್ಧ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವೂ ಇದೆ ಎನ್ನಲಾಗಿದೆ.