ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿ ಹಂತ ಹಂತವಾಗಿ ಆದೇಶ ಹೊರಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪ್ರಮುಖರೊಂದಿಗೆ ಸಭೆ ನಡೆಸಿ ಅವರ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದರು.
ಸಭೆಯ ನಂತರ ಮಾಹಿತಿ ನೀಡಿದ ಸಚಿವರು, ಅಂಗನವಾಗಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ಸೌಲಭ್ಯ ಕಲ್ಪಿಸಲು ಹಣಕಾಸು ಇಲಾಖೆ ಅನುಮತಿ ನೀಡಿದ್ದು, ಆದಷ್ಟು ಬೇಗ ಆದೇಶ ಹೊರಡಿಸಲಾಗುವುದು. ಇದರ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ನೀಡಬೇಕೆಂಬ ಬೇಡಿಕೆ ಕುರಿತಂತೆಯೂ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಮೂರು ಸಾವಿರಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿರುವ ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕ್ರಮ ತೆಗೆದುಕೊಳ್ಳುವ ಜೊತೆಗೆ ಅಂಗನವಾಡಿ ಕಾರ್ಯಕರ್ತರಿಗೆ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಆರೋಗ್ಯ ಸೌಲಭ್ಯ ಕಲ್ಪಿಸಲು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಪತ್ರ ಬರೆದು ಉಚಿತ ಆರೋಗ್ಯ ಸೌಲಭ್ಯ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.