ಉತ್ತರ ಕನ್ನಡ: ರಾಜ್ಯ ವಿಧಾಸಭೆ ಚುನಾವಣೆ ಕೆಲವು ತಿಂಗಳು ಬಾಕಿ ಇರುವಾಗಲೇ ಎಚ್ಚೆತ್ತ ಸರ್ಕಾರ ಉತ್ತರ ಕನ್ನಡ ಜಿಲ್ಲೆಯ ಜನರ ಹಲವು ವರ್ಷಗಳ ಬೇಡಿಕೆಯಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ ಮಂಜೂರು ಮಾಡಿದೆ.
ಕುಮಟಾ ನಗರದ ಕೇಂದ್ರ ಭಾಗದಲ್ಲಿ ಸರ್ವೆ ನಂ.440ರಲ್ಲಿ ಏಕಲವ್ಯ ಮಾದರಿ ವಸತಿ ಶಾಲೆ ನಿರ್ಮಾಣಕ್ಕೆ ಮೀಸಲಿಟ್ಟಿದ್ದ 15.35 ಎಕರೆ ಜಾಗವನ್ನೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರು ಮಾಡಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಏಕಲವ್ಯ ಮಾದರಿ ವಸತಿ ಶಾಲೆ ನಿರ್ಮಾಣಕ್ಕೆ ಪರ್ಯಾಯ ಜಾಗ ಒದಗಿಸುವ ಷರತ್ತಿನ ಮೇಲೆ ಒಟ್ಟು 17.14 ಎಕರೆ ಜಾಗದಲ್ಲಿ 15.35 ಎಕರೆ ಜಾಗ ಆಸ್ಪತ್ರೆಗೆ ಸ್ಥಳ ಮಂಜೂರು ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ಕಳೆದ ಮೂರು ವರ್ಷಗಳಿಂದ ಹೋರಾಟ, ಪ್ರತಿಭಟನೆಗಳು ತೀವ್ರಗೊಂಡಿದ್ದವು.