ಬೆಂಗಳೂರು: ಪ್ರಧಾನಿ ಮೋದಿ ಸ್ವಾಗತಕ್ಕಾಗಿ ಕಪೋಲ ಕಲ್ಪಿತ ಪಾತ್ರಗಳಾದ ಉರಿಗೌಡ-ನಂಜೇಗೌಡ ಹೆಸರಿನ ಕಮಾನು ಹಾಕಿರುವುದು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರನ್ನು ನೀಡಿದ ಮಂಡ್ಯಕ್ಕೆ ಮಾತ್ರವಲ್ಲ ಇಡೀ ಕರ್ನಾಟಕದ ಜನತೆಗೆ ಮಾಡಿರುವ ಅವಮಾನ. ಮುಖ್ಯಮಂತ್ರಿಯವರು ತಕ್ಷಣ ಮಧ್ಯೆ ಪ್ರವೇಶಿಸಿ ಈ ಸ್ವಾಗತ ಕಮಾನನ್ನು ಕಿತ್ತು ಹಾಕಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
ಉರೀಗೌಡ ಮತ್ತು ದೊಡ್ಡ ನಂಜೇಗೌಡ ಎಂಬ ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಅವರು ಟಿಪ್ಪುವನ್ನು ಕೊಂದ ಸೈನಿಕರು ಎಂದು ಸುಳ್ಳು ಕತೆ ಕಟ್ಟಿ ಒಕ್ಕಲಿಗರನ್ನು ಟಿಪ್ಪು ವಿರುದ್ಧ ಹೋರಾಡಿ ಬ್ರಿಟೀಷರಿಗೆ ಸಹಾಯ ಮಾಡಿದರು ಎಂದು ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಈಗಾಗಲೇ ಈ ಕಮಾನಿಗೆ ಸಮಾಜದ ಎಲ್ಲಾ ವರ್ಗಗಳಿಂದಲೂ ವಿರೋಧ ವ್ಯಕ್ತವಾಗಿದೆ.