ಹಾವೇರಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ದಾವಣಗೆರೆ ಜಿಲ್ಲಾಧ್ಯಕ್ಷ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಇಸ್ಮಾಯಿಲ್ ಜಬೀವುಲ್ಲಾ,ಉಪಾಧ್ಯಕ್ಷ ರಜ್ವಿ ರಿಯಾಜ್ ಅಹ್ಮದ್, ಜಿಲ್ಲಾ ಸಮಿತಿ ಸದಸ್ಯರಾದ ಫಯಾಜ್ ಅಹ್ಮದ್ ಮತ್ತು ಸಮೀವುಲ್ಲಾ ರವರು ಹಾವೇರಿ ಜಿಲ್ಲೆಯ ಗಲಭೆ ಪೀಡಿತ ಪ್ರದೇಶವಾದ ರಟ್ಟಿಹಳ್ಳಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ವೀಕ್ಷಿಸಿ ಈ ಘಟನೆಯಲ್ಲಿ ಭಾಗಿಯಾದ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಕಠಿಣವಾದ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಯಾವುದೇ ನಿರಪರಾಧಿಗಳನ್ನು ಬಂಧಿಸಬಾರದೆಂದು ಜಿಲ್ಲಾ ವರಿಷ್ಠಾಧಿಕಾರಿ ಡಾ- ಶಿವಕುಮಾರ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ರವರನ್ನು ಆಗ್ರಹಿಸಿದರು.
ಸಕಾರಾತ್ಮಕವಾಗಿ ಸ್ಪಂದಿಸಿದ ಪೊಲೀಸ್ ಅಧಿಕಾರಿಗಳು ನಿಷ್ಪಕ್ಷಪಾತ ತನಿಖೆ ನಡೆಸುವ ಭರವಸೆಯನ್ನು ನೀಡಿದ್ದಾರೆ.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಂಗಳವಾರ ಹಮ್ಮಿಕೊಂಡಿದ್ದ ಮೋಟಾರ್ ಬೈಕ್ ಮೆರವಣಿಗೆಯ ವೇಳೆ ಸಂಘಪರಿವಾರದ ಕಾರ್ಯಕರ್ತರು ಮುಸ್ಲಿಮರ ಮನೆ, ಮಸೀದಿ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ನಡೆಸಿದ್ದರು.