ಬಿಜೆಪಿಯ ಆಂತರಿಕ ಕುತಂತ್ರದಿಂದ ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ: ಡಿ.ಕೆ. ಶಿವಕುಮಾರ್

Prasthutha|

ಬೆಂಗಳೂರು: ‘ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸುವ ಬಿಜೆಪಿಯ ಆಂತರಿಕ ಕುತಂತ್ರದ ಭಾಗವಾಗಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

- Advertisement -

ಈ ಬಗ್ಗೆ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು, ‘ಮೀಸಲಾತಿ ವಿಚಾರದಲ್ಲಿ ಗೊಂದಲ ಮೂಡಿಸಿರುವವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಜನ ತಮಗೆ ಅನ್ಯಾಯ ಆದಾಗ ಅಧಿಕಾರದಲ್ಲಿರುವವರ ಮೇಲೆ ಆಕ್ರೋಶ ವ್ಯಕ್ತಪಡಿಸುವುದು ಸಹಜ. ಆದರೆ, ಅಧಿಕಾರದಲ್ಲಿರುವ ಮುಖ್ಯಮಂತ್ರಿಗಳು, ಸಚಿವರ ಮನೆ ಮೇಲೆ ದಾಳಿ ಆಗದೆ ಯಾವುದೇ ಅಧಿಕಾರ ಇಲ್ಲದ ಯಡಿಯೂರಪ್ಪ ಅವರ ಮನೆ ಮೇಲೆ ದಾಳಿ ಆಗಿದೆ ಎಂದರೆ ಇದು ಬಿಜೆಪಿಯ ಕುತಂತ್ರಕ್ಕೆ ಸಾಕ್ಷಿಯಲ್ಲದೆ ಮತ್ತೇನೂ’ ಎಂದು ಶಿವಕುಮಾರ್ ಅವರು ಪ್ರಶ್ನಿಸಿದರು.

ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ದಾಳಿ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಗಮನ ಸೆಳೆದಾಗ ಅವರು ಹೀಗೆ ಪ್ರತಿಕ್ರಿಯಿಸಿದರು.

- Advertisement -

‘ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿತ್ತು. ಈಗ ಗೃಹ ಸಚಿವ ಅಮಿತ್ ಶಾ ಅವರು ಯಡಿಯೂರಪ್ಪ ಅವರ ಮನೆಗೆ ಹೋಗಿ ಅವರ ಜತೆ ಉತ್ತಮ ಸಂಬಂಧ ಹೊಂದಿರುವಂತೆ ತೋರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂಬುದನ್ನು ಅವರು ಒಪ್ಪಿಕೊಂಡಿದ್ದಾರೆ. ಆಂತರಿಕವಾಗಿ ಯಡಿಯೂರಪ್ಪ ಅವರನ್ನು ನಿಯಂತ್ರಿಸಲು ಸಾಕಷ್ಟು ಒತ್ತಡ ಹೇರಲಾಗುತ್ತಿದೆ. ನಾನು ಈಗ ಆ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ’ ಎಂದು ವ್ಯಾಖ್ಯಾನಿಸಿದರು.

‘ಈ ಮೀಸಲಾತಿ ವಿಚಾರ ಕೇವಲ ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲೇ ಗೊಂದಲ ಮೂಡಿಸಿದೆ. ಬೇರೆ ರಾಜ್ಯಗಳಲ್ಲಿ ಈಗಾಗಲೇ ಇಂತಹ ಗೊಂದಲದ ಮೀಸಲಾತಿ ತಂದಾಗ ಅದರ ವಿರುದ್ಧ ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟಿದೆ. ಆದರೂ ಈ ಸರ್ಕಾರ ಜನರಿಗೆ ವಂಚಿಸಲು ಇಬ್ಬರು ಸಚಿವರೇ ಕೂತು ಈ ಸುಳ್ಳು ಮೀಸಲಾತಿಗೆ ಹೆಚ್ಚಳಕ್ಕೆ ಮುಂದಾಗಿದ್ದಾರೆ. ಯಾವ ವರದಿ ಆಧಾರದ ಮೇಲೆ ಸರ್ಕಾರ ಈ ತೀರ್ಮಾನ ಮಾಡಿದೆ? ಹಿಂದುಳಿದ ವರ್ಗಗಳ ಆಯೋಗ ಕಳೆದ ಡಿಸೆಂಬರ್ ನಲ್ಲಿ ನೀಡಿದ ಮಧ್ಯಂತರ ವರದಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿ ಎಂದು ತಿಳಿಸಿದೆಯೇ? ಮಧ್ಯಂತರ ವರದಿ ಮೇಲೆ ಮೀಸಲಾತಿ ಹೆಚ್ಚಳ ಮಾಡಲು ಸಾಧ್ಯವೇ? ಮೀಸಲಾತಿ ಹೆಚ್ಚಳವಾಗಲಿ ಅಥವಾ ಒಳ ಮೀಸಲಾತಿ ಆಗಲಿ, ಸರಿಯಾದ ಅಧ್ಯಯನ ವರದಿ ಆಧರಿಸಿ, ಸಂವಿಧಾನದಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕೆ ಹೊರತು ಕೇವಲ ಚುನಾವಣೆ ಗಿಮಿಕ್ ಮಾಡಲು ಏಕಾಏಕಿ ಆದೇಶ ನೀಡಿದರೆ ಜಾರಿಗೆ ಬರುವುದಿಲ್ಲ. ಅಲ್ಪಸಂಖ್ಯಾತರ ಮೀಸಲಾತಿ ಕಸಿದು ನಮಗೆ ನೀಡಿ ಎಂದು ಒಕ್ಕಲಿಗ ಹಾಗೂ ಲಿಂಗಾಯತ ಸ್ವಾಮೀಜಿಗಳು ಕೇಳಿದ್ದರೇ? ಒಕ್ಕಲಿಗರು ಹಾಗೂ ಲಿಂಗಾಯತರು ತಮ್ಮ ಜನಸಂಖ್ಯೆ ಆಧಾರದ ಮೇಲೆ ಕ್ರಮವಾಗಿ 12% ಹಾಗೂ 15% ಹೆಚ್ಚಳಕ್ಕೆ ಬೇಡಿಕೆ ಇಡಲಾಗಿತ್ತು. ಮುಸಲ್ಮಾನರಿಂದ ಕಸಿದು 2% ಮೀಸಲಾತಿಗೆ ಬೇಡಿಕೆ ಇಟ್ಟಿರಲಿಲ್ಲ. ಈಗಾಗಲೇ ಮೀಸಲಾತಿ 56% ಆಗಿದ್ದು, ಒಕ್ಕಲಿಗರು ಲಿಂಗಾಯತರು ಮೀಸಲಾತಿ ಸೇರಿಸಿ ವಿಸ್ತರಣೆ ಮಾಡಲಿ’ ಎಂದು ಹೇಳಿದರು.

‘ಅಲ್ಪಸಂಖ್ಯಾತರ ಮೀಸಲಾತಿ ಕಸಿದಿರುವ ಬಗ್ಗೆ ಜೆಡಿಎಸ್ ನಾಯಕರಾದ ಸಿ.ಎಂ ಇಬ್ರಾಹಿಂ ಅವರು ಇದುವರೆಗೂ ಏನು ಮಾತನಾಡಿಲ್ಲ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮೀಸಲಾತಿ ಬದಲಾವಣೆ ಮಾಡಬಾರದು ಎಂದು ಆಗ್ರಹಿಸುತ್ತದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರು, ಒಕ್ಕಲಿಗರು, ಲಿಂಗಾಯತರ ಹಿತ ಕಾಯುವ ತೀರ್ಮಾನ ಮಾಡಲಾಗುವುದು’ ಎಂದು ತಿಳಿಸಿದರು.



Join Whatsapp