ಬೆಂಗಳೂರು: ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಇದ್ರೀಸ್ ಪಾಷಾ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಕೆಲವೇ ದಿನಗಳಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಬೆಂಗಳೂರು ಪೊಲೀಸರು ಅಮಾನುಷ ಹಲ್ಲೆ ಪ್ರಕರಣವೊಂದರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಾರ್ಚ್ 20 ರಂದು ಹೊಸೂರು ರಸ್ತೆಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಅಲೀಮುಲ್ಲಾ ಬೇಗ್ ಎಂಬ 30 ವರ್ಷದ ಯುವಕನ ಮೇಲೆ ಪುನೀತ್ ಕೆರೆಹಳ್ಳಿ ಮತ್ತು ಇತರ ಮೂವರು ಸ್ಟನ್ ಗನ್ ನಿಂದ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿದ್ದರು. ಅಲೀಮುಲ್ಲಾ ಅವರ ದೂರಿನ ಆಧಾರದ ಮೇಲೆ, ಏಪ್ರಿಲ್ 6 ರಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪುನೀತ್ ವಿರುದ್ಧ ಹಲ್ಲೆ, ಅಕ್ರಮ ತಡೆ ಮತ್ತು ಕ್ರಿಮಿನಲ್ ಬೆದರಿಕೆ ಸೇರಿದಂತೆ ಇತರ ಅಪರಾಧಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸಹಾಯಕ್ಕಾಗಿ ಅಲೀಮುಲ್ಲಾ ಬೇಗ್ ಕೂಗಿಕೊಂಡರೂ, ಸುಮಾರು ಒಂದು ಗಂಟೆಗಳ ಕಾಲ ಅವರಿಗೆ ಚಿತ್ರಹಿಂಸೆ ನೀಡಲಾಗಿತ್ತು. ಬಳಿಕ ಪ್ರಮುಖ ಆರೋಪಿ ಪುನೀತ್ ಕೆರೆಹಳ್ಳಿ ಸಾಮಾಜಿಕ ಮಾಧ್ಯಮದಲ್ಲಿ ಘಟನೆಯ ಲೈವ್ ವೀಡಿಯೊವನ್ನು ಮಾಡಿದ್ದನು. ಟ್ರಕ್‌ನೊಳಗೆ ಉಯ್ಯಾಲೆಯಲ್ಲಿ ಮಲಗಿದ್ದ ಅಲೀಮುಲ್ಲಾಗೆ ಚಿತ್ರಹಿಂಸೆ ನೀಡಲು ಪುನೀತ್ ಸ್ಟನ್ ಗನ್ ಅನ್ನು ಬಳಸುತ್ತಿರುವ ವೀಡಿಯೋ ವೈರಲ್ ಆಗಿತ್ತು.