ರಾಜಕೀಯ ಪಕ್ಷದ ಪ್ರತಿನಿಧಿಯೊಂದಿಗೆ ಸೆಲ್ಫಿ ತೆಗೆದುಕೊಂಡ ನೌಕರನ ಅಮಾನತು

Prasthutha|

ಬೆಂಗಳೂರು: ರಾಜಕೀಯ ಪಕ್ಷದ ಪ್ರತಿನಿಧಿಯೊಂದಿಗೆ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಲೆಕ್ಕ ವಿಚಕ್ಷಣ ತಂಡದ ಮುಖ್ಯಸ್ಥರಾದ ನೆಲಮಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಕ ಅಂಜನ್ ಕುಮಾರ್.ಬಿ.ಜೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಪಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಆದೇಶಿಸಿದ್ದಾರೆ.

- Advertisement -


ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಬಂಧ ಅಂಜನ್ ಕುಮಾರ್.ಬಿ.ಜೆ. ಅವರನ್ನು ನೆಲಮಂಗಲದ ಸೋಲೂರು ಹೋಬಳಿಯಲ್ಲಿ ಸ್ಥಾಪಿಸಲಾಗಿರುವ ಚೆಕ್ ಪೋಸ್ಟ್’ನಲ್ಲಿ ಎಸ್.ಎಸ್.ಟಿ ತಂಡದ ಮುಖ್ಯಸ್ಥರಾಗಿ ನೇಮಿಸಲಾಗಿತ್ತು. ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸುವ ಸಮಯದಲ್ಲಿ ಅಂಜನ್ ಕುಮಾರ್.ಬಿ.ಜೆ. ಅವರು ರಾಜಕೀಯ ಪಕ್ಷದ ಪ್ರತಿನಿಧಿಗಳೊಂದಿಗೆ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದರು.
ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಪ್ರಜಾ ಪ್ರತಿನಿಧಿ ಕಾಯ್ದೆ 1951 ರ ಅಡಿ ಶಿಸ್ತು ಕ್ರಮ ಕೈಗೊಳ್ಳಲು 181-ನೆಲಮಂಗಲ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಅವರು ಜಿಲ್ಲಾಧಿಕಾರಿ ಅವರಿಗೆ ವರದಿ ಸಲ್ಲಿಸಿದ್ದರು. ವರದಿ ಪರಿಶೀಲಿಸಿದ ಜಿಲ್ಲಾಧಿಕಾರಿ ಆರ್.ಲತಾ ಅವರು ಅಂಜನ್ ಕುಮಾರ್.ಬಿ.ಜೆ. ಅವರನ್ನು ಅಮಾನತು ಪಡಿಸಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಆದೇಶಿಸಿದ್ದಾರೆ.



Join Whatsapp