ಮಂಗಳೂರು: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಏ.13 ಗುರುವಾರ, 2023ರಂದು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಯಶೋಧ ಹಾಗೂ ಜೆ.ಡಿ.ಯು ಪಕ್ಷದ ಅಭ್ಯರ್ಥಿಯಾಗಿ ಸುಪ್ರೀತ್ ಕುಮಾರ್ ಪೂಜಾರಿ ಅವರು ಉಮೇದುವಾರಿಕೆಗೆ ನಾಮಪತ್ರ ಸಲ್ಲಿಸಿದ್ದಾರೆ.
ಉಳಿದಂತೆ 200 ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ, 201 ಮೂಡಬಿದ್ರೆ ವಿಧಾನಸಭಾ ಕ್ಷೇತ್ರ, 203 ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ, 204 ಮಂಗಳೂರು ವಿಧಾನಸಭಾ ಕ್ಷೇತ್ರ, 205 ಬಂಟ್ವಾಳ ವಿಧಾನ ಸಭಾ ಕ್ಷೇತ್ರ, 206 ಪುತ್ತೂರು ವಿಧಾನಸಭಾ ಕ್ಷೇತ್ರ ಹಾಗೂ 207 ಸುಳ್ಯ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.
ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದೆ. ಮೇ.10 ರಂದು ಮತದಾನ ನಡೆಯಲಿದ್ದು, ಮೇ. 13 ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.