ದಕ್ಷಿಣ ಕನ್ನಡ: 17ಅಭ್ಯರ್ಥಿಗಳಿಂದ 18 ನಾಮಪತ್ರ ಸಲ್ಲಿಕೆ

Prasthutha|

ಮಂಗಳೂರು : ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಏಪ್ರಿಲ್ 19 ರ ಬುಧವಾರ ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 17 ಅಭ್ಯರ್ಥಿಗಳು 18 ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಹೇಶ್ ನಾಮಪತ್ರ ಸಲ್ಲಿಸಿದ್ದಾರೆ. ಮೂಡುಬಿದರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರ ಎಸ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ದಯಾನಂದ, ಪಕ್ಷೇತರ ಅಭ್ಯರ್ಥಿಯಾಗಿ ಮ್ಯಾಕ್ಸಿಂ ಪಿಂಟೋ ಉಮೇದುವಾರಿಕೆ ಸಲ್ಲಿಸಿದ್ದಾರೆ.

 ಅದರಂತೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಎಚ್. ವಿನಯ್ ಆಚಾರ್ಯ, ಹಿಂದುಸ್ತಾನ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಬಿ. ಪ್ರವೀಣ್ ಚಂದ್ರರಾವ್ ಹಾಗೂ ಆಮ್ ಆದ್ಮಿ ಪಕ್ಷದಿಂದ ಸಂದೀಪ್ ಶೆಟ್ಟಿ ನಾಮಪತ್ರ ಸಲ್ಲಿಸಿದ್ದಾರೆ.

- Advertisement -

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸಂತೋಷ್ ಕಾಮತ್, ಅಖಿಲ ಭಾರತ ಹಿಂದೂ ಮಹಾಸಭಾ ಅಭ್ಯರ್ಥಿಯಾಗಿ ಧರ್ಮೇಂದ್ರ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ನಿತಿನ್ ಕುಮಾರ್, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ವಿನ್ಸಿ ಪಿಂಟೋ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿ ಇಸ್ಮಾಯಿಲ್ ಕೆ. ಶಫಿ, ಎಸ್‌ಡಿಪಿಐ ಅಭ್ಯರ್ಥಿಯಾಗಿ ಪಿ. ಇಬ್ರಾಹಿಂ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ 2 ಸೆಟ್ ನಾಮಪತ್ರಗಳನ್ನು ಸಲ್ಲಿಸಿದರೆ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಐವಾನ್ ಪೇರಾವೋ ಪಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸುಂದರ ಕೋಯಿಲಾ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಎಚ್. ವೆಂಕಟೇಶ್ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳೂರು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ನಾಮಪತ್ರಗಳು ಸ್ವೀಕೃತವಾಗಿಲ್ಲ, ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದೆ.



Join Whatsapp