ಮಂಗಳೂರು : ಕಳೆದ ವಿಧಾನಸಭಾ ಚುನಾವಣೆಯ ವೇಳೆ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಪರಾಭವಗೊಂಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕಕ್ಕೆ ಮೇಜರ್ ಸರ್ಜರಿ ನಡೆಸಲು ಕೆಪಿಸಿಸಿ ಮುಂದಾಗಿದೆ. ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರ ತಲೆದಂಡಕ್ಕೆ ಕೆಪಿಸಿಸಿ ಅಧ್ಯಕ್ಷರು ಚಿಂತನೆ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.
2013ರ ಚುನಾವಣೆಯಲ್ಲಿ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತ್ತು. 2017ರಲ್ಲಿ ಹರೀಶ್ ಕುಮಾರ್ ಜಿಲ್ಲಾದ್ಯಕ್ಷರಾದ ಬಳಿಕ ನಡೆದ ಎರಡು ವಿಧಾನಸಭಾ ಚುನಾವಣೆಯಲ್ಲಿಕಾಂಗ್ರೆಸ್ ಪಕ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆಲಕಚ್ಚಿದೆ. 2018ರಲ್ಲಿ 8 ಸ್ಥಾನಗಳ ಪೈಕಿ ಕಾಂಗ್ರೆಸ್ ಕೇವಲ 1 ಸ್ಥಾನಗಳನ್ನು ಗೆದ್ದಿತ್ತು. 2023ರಲ್ಲಿ ಕೇವಲ 2 ಸ್ಥಾನಗಳನ್ನು ಮಾತ್ರ ಕಾಂಗ್ರೆಸ್ ಗೆದ್ದಿದೆ. ಹರೀಶ್ ಕುಮಾರ್ ಅವರು ಜಿಲ್ಲೆಯ ಪ್ರಬಲ ಬಿಲ್ಲವ ಸಮುದಾಯಕ್ಕೆ ಸೇರಿದ ನಾಯಕರಾಗಿದ್ದರೂ ಬಿಲ್ಲವ ಮತಗಳನ್ನು ಕಾಂಗ್ರೆಸ್ ಕಡೆ ಸೆಳೆಯಲು ವಿಫಲರಾಗಿದ್ದಾರೆ. ಈ ಕಾರಣಕ್ಕೆ ಅವರನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ 6 ವರ್ಷಗಳಿಂದ ಜಿಲ್ಲಾಧ್ಯಕ್ಷ ಸ್ಥಾನದಲ್ಲಿರುವ ಹರೀಶ್ ಕುಮಾರ್ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಂಟಾದ ಸೋಲಿನ ನೈತಿಕ ಹೊಣೆಹೊತ್ತು ಸ್ವಯಂಪ್ರೇರಿತರಾಗಿ ರಾಜೀನಾಮೆ ನೀಡಬೇಕೆಂದು ಪಕ್ಷ ಬಯಸಿತ್ತು. ಕಾಂಗ್ರೆಸ್ ಕಾರ್ಯಕರ್ತರು ಕೂಡ ಹರೀಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿದ್ದರು. ಆದರೆ ಹರೀಶ್ ಕುಮಾರ್ ಅವರು ಕುರ್ಚಿಗೆ ಅಂಟಿಕೊಂಡು ಕೂತಿರುವುದು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರಲ್ಲಿ ಇನ್ನಷ್ಟು ಅಸಮಾಧಾನ ಉಂಟುಮಾಡಿದೆ. ಈ ಅಸಮಾಧಾನ ಸ್ಫೋಟಗೊಳ್ಳುವ ಮೊದಲೇ ಹರೀಶ್ ಕುಮಾರ್ ಅವರನ್ನು ಬದಲಾಯಿಸಲು ಕೆಪಿಸಿಸಿ ನಾಯಕತ್ವ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.
ಮುಂದಿನ 15 ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದ್ದು, ಜಿಲ್ಲಾಧ್ಯಕ್ಷ ಸ್ಥಾನದ ರೇಸ್ ನಲ್ಲಿ ಮಾಜಿ ಜಿಲ್ಲಾಧ್ಯಕ್ಷರೂ ಆಗಿರುವ ಮಾಜಿ ಸಚಿವ ರಮನಾಥ ರೈ ಅವರ ಹೆಸರು ಮುಂಚೂಣಿಯಲ್ಲಿದೆ. ರಮನಾಥ ರೈ ಜೊತೆ ಮಾಜಿ ಜಿಲ್ಲಾ ಪಂಚಯತ್ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮತ್ತು ಸುಳ್ಯದ ವೆಂಕಪ್ಪ ಗೌಡ ಅವರ ಹೆಸರು ಕೇಳಿಬರುತ್ತಿದೆ.
2008 ಮತ್ತು 2013ರಲ್ಲಿ ರಮನಾಥ ರೈ ಅವರು ಜಿಲ್ಲಾಧ್ಯಕ್ಷರಾಗಿದ್ದ ವೇಳೆ ಕಾಂಗ್ರೆಸ್ ಪಕ್ಷ ದಕ್ಷಿಣ ಕನ್ನಡ ಜಿಲ್ಲೆಯ ಉತ್ತಮ ಸಾಧನೆ ಮಾಡಿತ್ತು. 2008ರ ಚುನಾವಣೆಯಲ್ಲಿ 8 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳನ್ನು ಗೆದ್ದಿದ್ದ ಕಾಂಗ್ರೆಸ್ 2013ರ ಚುನಾವಣೆಯಲ್ಲಿ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳನ್ನು ಗೆದ್ದು ದಿಗ್ವಿಜಯ ಸಾದಿಸಿತ್ತು. ಹೀಗಾಗಿ ಮತ್ತೊಮ್ಮೆ ರಮನಾಥ ರೈ ಅವರಿಗೆ ಪಕ್ಷದ ನೇತೃತ್ವ ಕೊಟ್ಟು ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸಬೇಕು ಎಂಬ ಕೂಗು ಕೇಳಿಬರುತ್ತಿದೆ.
ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಯೋಗವೊಂದು ರಮನಾಥ ರೈ ಅವರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಬೇಕೆಂದು ಆಗ್ರಹಿಸಿದೆ. ಹರೀಶ್ ಕುಮಾರ್ ಬದಲಿಗೆ ರಮನಾಥ ರೈ ಅವರಿಗೆ ಪರಿಷತ್ ಸ್ಥಾನ ನೀಡಬೇಕೆಂದು ಜಿಲ್ಲೆಯ ಕಾಂಗ್ರೆಸ್ ಪ್ರಮುಖರು ಹೈಕಮಾಂಡ್ ನಾಯಕರ ಬಳಿ ಮನವಿ ಮಾಡಿದ್ದಾರೆ.