ಬೆಂಗಳೂರು: ಐದೂ ಗ್ಯಾರಂಟಿಯನ್ನು ಇದೇ ಆರ್ಥಿಕ ವರ್ಷದಲ್ಲಿ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸಭೆಯ ಅಧಿವೇಶನ ಪ್ರಾರಂಭವಾಗಿ ಮೂರು ದಿನವಾದರೂ ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಸದನದಲ್ಲಿ ಆರ್. ಅಶೋಕ್ ಮಾತನಾಡುತ್ತಿದ್ದ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಲು ಮುಂದಾದಾಗ ಮಧ್ಯಪ್ರವೇಶಿಸಿದ ಸಿಎಂ, ಮೂರು ದಿನವಾದರೂ ನಿಮಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಆಗುತ್ತಿಲ್ಲ. ಬುರುಡೆ ಹೊಡೆಯುತ್ತಿದ್ದೀರಿ ಎಂದು ವ್ಯಂಗ್ಯವಾಡಿದರು.
ಹೆಣ್ಣು ಮಕ್ಕಳ ಉಚಿತ ಪ್ರಯಾಣದ ಪರವೋ ವಿರುದ್ಧವೋ ಎಂಬುದನ್ನು ಬಿಜೆಪಿಯವರು ಹೇಳಲಿ, ನಾವು ಚರ್ಚೆಗೆ ಉತ್ತರ ಕೊಡಲು ತಯಾರಿದ್ದೇವೆ. 2018ರಲ್ಲಿ ಆಶ್ವಾಸನೆ ಕೊಟ್ಟು ಓಡಿಹೋದವರು ನಿಮ್ಮ ಪ್ರಣಾಳಿಕೆಯಲ್ಲಿ ನಿಮ್ಮ ಮುಖವನ್ನು ನೋಡಿಕೊಳ್ಳಿ ಎಂದು ಕುಟುಕಿದರು. ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನಮ್ಮ ಪಕ್ಷ ಐದು ಭರವಸೆಗಳನ್ನು ನೀಡಿತ್ತು. ಅದರಲ್ಲಿ ನಮ್ಮ ಸರ್ಕಾರ ಮೂರು ಗ್ಯಾರಂಟಿಗಳನ್ನು ಈಡೇರಿಸಿದೆ. ನಾಲ್ಕನೇ ಗ್ಯಾರಂಟಿ ಈಡೇರಿಸುವ ಸಿದ್ಧತೆಯಲ್ಲಿದ್ದೇವೆ. 6 ತಿಂಗಳ ಬಳಿಕ 5 ನೇ ಗ್ಯಾರಂಟಿಯು ಅನುಷ್ಠಾನವಾಗಲಿದೆ. ಯಾರು ಏನೇ ಹೇಳಿದರೂ ಶೇ.100ಕ್ಕೆ ನೂರರಷ್ಟು 5 ಗ್ಯಾರಂಟಿಯನ್ನು ಇದೇ ಆರ್ಥಿಕ ವರ್ಷದಲ್ಲಿ ಈಡೇರಿಸುತ್ತೇವೆ ಎಂದು ಸದನಕ್ಕೆ ಭರವಸೆ ನೀಡಿದರು.