ಬೆಂಗಳೂರು: ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ರೂ. 5.14 ಕೋಟಿ ಹಣವನ್ನ ಬಿಡುಗಡೆ ಮಾಡಲಾಗಿದೆ. ಇದರಿಂದ, ಈ ಹಿಂದೆ ಒದಗಿಸಿದ್ದ 1 ಕೋಟಿ ಹಣ ಸೇರಿದಂತೆ ಸರ್ಕಾರ ಈವರೆಗೂ ಒಟ್ಟು ರೂ. 6.14 ಕೋಟಿ ಹಣ ನೀಡಿದಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಮುಂಗಾರಿನ ಅಭಾವ ಎದುರಾಗಿದ್ದು ಹಲವು ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಗ್ರಾಮೀಣ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವತಿಯಿಂದ ರಾಜ್ಯದಲ್ಲಿ ಬರದ ಛಾಯೆ ಎದುರಾಗುವ ಮುನ್ನವೇ ಎಲ್ಲಾ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದು ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ.