ಹೊಸದಿಲ್ಲಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಗುಂಪೊಂದು ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ(ಸಿಬಿಐ) ತನಿಖೆ ನಡೆಸಲಿದೆ ಎಂದು ಸರ್ಕಾರದ ಉನ್ನತ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಜನಾಂಗೀಯ ಹಿಂಸಾಚಾರದಿಂದ ತತ್ತರಿಸುತ್ತಿರುವ ಮಣಿಪುರದಲ್ಲಿನ ಎಲ್ಲಾ ಘೋರ ಅಪರಾಧಗಳಲ್ಲಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪ್ರತಿಪಾದಿಸಿದ್ದಾರೆ.
ಮೇ4ರಂದು ನಡೆದ ಘಟನೆಯ ವಿಡಿಯೊ ಕಳೆದ ವಾರ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಗೊಳ್ಳುವ ಮೂಲಕ ಪ್ರಕರಣ ಹೊರಬಿದ್ದಿತ್ತು.
ಈ ಹೇಯ ಕೃತ್ಯದ ವಿಚಾರಣೆಯನ್ನು ನಡೆಸುವಂತೆ ಕೇಂದ್ರ ಸರ್ಕಾರ ಸಿಬಿಐ ಅನ್ನು ಕೋರಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಯನ್ನು ಚಿತ್ರೀಕರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಬಳಿಯಿಂದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವಾಲಯವು ಮೈತೇಯಿ ಮತ್ತು ಕುಕಿ ಎರಡೂ ಸಮುದಾಯಗಳ ಮುಖಂಡರೊಂದಿಗೆ ಸಂಪರ್ಕದಲ್ಲಿದೆ. ರಾಜ್ಯದಲ್ಲಿ ಶಾಂತಿ ಪುನಃಸ್ಥಾಪಿಸಲು ಮಾತುಕತೆ ಮುಂದುವರಿದಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಅಧಿಕೃತ ದಾಖಲೆಗಳ ಪ್ರಕಾರ, ಮಣಿಪುರದಲ್ಲಿ ಮೂರು ತಿಂಗಳಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ ಸುಮಾರು 150 ಜನರು ಸಾವಿಗೀಡಾಗಿದ್ದಾರೆ.
ಮಣಿಪುರ ಘರ್ಷಣೆಗೆ ಸಂಬಂಧಿಸಿದ ಐದು ಗಂಭೀರ ಪ್ರಕರಣಗಳ ತನಿಖೆಯನ್ನು ಈಗಾಗಲೇ ಸಿಬಿಐಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.