ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಕಾಂಗ್ರೆಸ್ ‘ಆಪರೇಷನ್ ಹಸ್ತಕ್ಕೆ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕಡಿಮೆ ಸ್ಥಾನಗಳು ಬರಲಿವೆ ಎಂದು ಸಮೀಕ್ಷೆಗಳು ದೃಢಪಡಿಸಿವೆ. ಇದರಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಮೇಲೆ ನೇರ ಪರಿಣಾಮ ಬೀರಲಿದೆ. ಹೀಗಾಗಿ ಕಾಂಗ್ರೆಸ್ನವರು ಬೇರೆ ಪಕ್ಷಗಳಿಂದ ನಾಯಕರನ್ನು ಸೆಳೆದು ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಷಡ್ಯಂತ್ರ ನಡೆಸುತ್ತಿದ್ದಾರೆ. ಅದು ಯಶಸ್ವಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ನ ಆಪರೇಷನ್ ಹಸ್ತದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಮುಂಬರುವ ಲೋಕಸಭೆ ಚುನಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಭಯವಿದೆ. ಭ್ರಷ್ಟಾಚಾರ ಮತ್ತು ಇತರ ಅಕ್ರಮಗಳ ಬಗ್ಗೆ ವರದಿ ಮಾಡುವ ಪತ್ರಕರ್ತರಿಗೆ ಕಾಂಗ್ರೆಸ್ ಸರ್ಕಾರ ನೋಟಿಸ್ ಜಾರಿ ಮಾಡುತ್ತಿದೆ. ಪತ್ರಿಕಾ ಸ್ವಾತಂತ್ರ್ಯ ಮತ್ತು ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ. ಸರ್ವಾಧಿಕಾರದ ಆಡಳಿತ ನಡೆಸುತ್ತಿದೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ವಿರೋಧ ಪಕ್ಷಗಳ ಪ್ರಮುಖ ನಾಯಕರನ್ನು ಸ್ವಾಗತಿಸಲು ಪ್ರಾರಂಭಿಸಿದೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ 2ನೇ ಸ್ಥಾನ ಪಡೆದಿದ್ದ ಜೆಡಿಎಸ್‌ನ ಹಿರಿಯ ಮುಖಂಡ ಆಯನೂರು ಮಂಜುನಾಥ್ ಮತ್ತು ಎಸ್‌ಪಿ ನಾಗರಾಜೇಗೌಡ ಅವರು ಬೆಂಗಳೂರಿನಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಡಿಸಿಎಂ ಹಾಗೂ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.