ಮಂಗಳೂರು: ನಗರದ ಅಡ್ಯಾರ್ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ತಂಡವೊಂದು ಮಂಗಳೂರು ನಗರದ ಅಡ್ಯಾರ್ ಪರಿಸರದಲ್ಲಿ ಮಾರಾಕಾಯುಧಗಳಾದ ತಲವಾರುಗಳೊಂದಿಗೆ ಮತ್ತೊಂದು ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಮಾರಾಕಾಯುಧಗಳನ್ನು ಹೊಂದಿಕೊಂಡು ಕೃತ್ಯವೆಸಗಲು ಹೊಂಚು ಹಾಕುತ್ತಿದ್ದ ಆರೋಪಿಗಳಾದ ಬಂಟ್ವಾಳ ತಾಲೂಕಿನ ಅಮೆಮಾರ್ ನಿವಾಸಿಗಳದ ತಸ್ಲೀಮ್ ಯಾನೆ ಗರುಡ ತಸ್ಲೀಮ್(34) ಮತ್ತು ಹೈದರಾಲಿ ಯಾನೆ ಹೈದು(26) ಎಂಬವರನ್ನು ವಶಕ್ಕೆ ಪಡೆದುಕೊಂಡು ಅವರ ವಶದಿಂದ ತಲವಾರುಗಳು-2, ಚೂರಿ-1, ಮೊಬೈಲ್ ಫೋನುಗಳು-2, ಹಾಗೂ KL -14-AB-7212 ಮಹೇಂದ್ರ ಪಿಕ್ ಅಪ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5,21,000/- ಆಗಬಹುದು. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ಹಿನ್ನೆಲೆ: ಫರಂಗಿಪೇಟೆ ಪರಿಸರದಲ್ಲಿ ಅಕ್ರಮ ಜಾನುವಾರು ಸಾಗಾಟದ ಎರಡು ತಂಡಗಳ ನಡುವೆ ಜಾನುವಾರು ಸಾಗಾಟದ ವಿಷಯದಲ್ಲಿ ಗಲಾಟೆಯಾಗಿರುತ್ತದೆ. ಅಕ್ರಮ ಜಾನುವಾರು ಸಾಗಾಟ ವಿಚಾರವಾಗಿದ್ದರಿಂದ ಈ ವಿಚಾರವು ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಈ ವಿಚಾರದಲ್ಲಿ ಎರಡು ತಂಡಗಳ ನಡುವೆ ಆಗಾಗ್ಗೆ ಸಣ್ಣ ಸಣ್ಣ ಮಾತುಕತೆಗಳಾಗಿದ್ದು, ಈ ದಿನ ತಸ್ಲಿಂ ಹಾಗೂ ಆತನ ಸಹಚರರು ಇನ್ನೊಂದು ತಂಡದ ಕೊಲೆಗೆ ಸಂಚು ರೂಪಿಸಿ ಮಾರಕಾಯುಧಗಳಾದ ತಲವಾರುಗಳೊಂದಿಗೆ ಹೊಂಚು ಹಾಕುತ್ತಿದ್ದ ಮಾಹಿತಿಯನ್ನು ಪಡೆದು ಆರೋಪಿಗಳನ್ನು ಪತ್ತೆ ಹಚ್ಚಿ ಕೊಲೆ ಸಂಚನ್ನು ವಿಫಲಗೊಳಿಸಿರುವುದಾಗಿದೆ. ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿ ತಲೆಮರೆಸಿಕೊಂಡಿದ್ದು ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪೈಕಿ ತಸ್ಲೀಮ್ @ ಗರುಡ ತಸ್ಲೀಮ್ ಎಂಬಾತನು ಈ ಹಿಂದೆ ಮಂಗಳೂರು ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಗಳಲ್ಲಿ, ರೈಲ್ವೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹೀಗೆ ಒಟ್ಟು 14 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಈತನು ಸುಮಾರು 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದನು. ಇನ್ನೋರ್ವ ಆರೋಪಿ ಹೈದರಾಲಿ @ಹೈದು ಎಂಬಾತನು ಈ ಹಿಂದೆ ಮೂಡಬಿದ್ರಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಗಳ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಶ್ರೀ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿರುತ್ತಾರೆ.