ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿದೆ.
ಅಲ್ಲದೇ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನೂ ಸಹ ಹೈಕೋರ್ಟ್ ತೆರವುಗೊಳಿಸಿದ್ದು, 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ಗೆ ಮತ್ತೆ ಸಿಬಿಐ ತನಿಖೆ ಸಂಕಷ್ಟಕ್ಕೆ ಸಿಲುಕಿದ್ದಾರೆ.