ಬೆಂಗಳೂರು: ಮತ್ತೆ 7 ತಾಲೂಕುಗಳನ್ನು ಸೇರ್ಪಡೆ ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಬೀದರ್ ಜಿಲ್ಲೆಯ ಔರಾದ್, ಬೀದರ್, ಚಿಟಗುಪ್ಪಾ, ಹುಮ್ನಾಬಾದ್, ಕಮಲನಗರ, ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು, ವಿಜಯಪುರ ಜಿಲ್ಲೆಯ ತಿಕೋಟಾ ಬರಪೀಡಿತ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡ ತಾಲೂಕುಗಳು.
ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ-2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿರುವ ಮಾನದಂಡಗಳ ಪ್ರಕಾರ ಮತ್ತು ಜಿಲ್ಲಾಧಿಕಾರಿಗಳಿಂದ ಬೆಳಹಾನಿ ಸಮೀಕ್ಷೆ ವರದಿಯ ಅನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೊಸದಾಗಿ 07 ತಾಲ್ಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ 6 ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಘೋಷಿಸಿ ಆದೇಶಿಸಲಾಗಿದೆ.
ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯ ಕೊರತೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದ್ದು ಬರಗಾಲ ಛಾಯೆ ಮೂಡಿದೆ. ಹೀಗಾಗಿ ಸರ್ಕಾರವು ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಈಗಾಗಲೇ ಘೋಷಣೆ ಮಾಡಿತ್ತು.
ಬರ ಪೀಡಿತ ತಾಲೂಕುಗಳ ನಿರ್ವಹಣೆಗಾಗಿ ಸರ್ಕಾರ ರಾಜ್ಯದ ಎಲ್ಲಾ ತಾಲೂಕುಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಆದೇಶ ಮಾಡಿದೆ.