ಮೈಸೂರು: ಲೋಕಸಭಾ ಚುನಾವಣೆಗೆ ತಿಂಗಳುಗಳು ಬಾಕಿ ಉಳಿದಿದ್ದು, ಮೊನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಿ ವಿ ಸದಾನಂದಗೌಡ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಅವರ ಬೆನ್ನಿಗೇ ಮತ್ತೊಬ್ಬ ಬಿಜೆಪಿ ಸಂಸದ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮಾಜಿ ಕೇಂದ್ರ ಸಚಿವ ಹಾಗೂ ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿ ಘೋಷಿಸಿದವರು.
ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಈಗಾಗಲೇ ಕರ್ನಾಟಕದಲ್ಲಿರುವ ತನ್ನ ಹಾಲಿ ಸಂಸದರಲ್ಲಿ ಕೆಲವರಿಗೆ ಟಿಕೆಟ್ ನೀಡದಿರಲು ನಿರ್ಧರಿಸಿದೆ. ಈಗಾಗಲೇ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಂದ ಬದಲಾವಣೆಯಂತೆ ವಯೋಮಿತಿಯ ಆಧಾರದ ಮೇಲೆ ಕೆಲವು ಹಾಲಿ ಸಂಸದರಿಗೆ ಟಿಕೆಟ್ ನೀಡಿರಲು ನಿರ್ಧರಿಸಿದೆ. ಲೋಕಸಭಾ ಚುನಾವಣೆಯಲ್ಲಿ ಕೆಲವು ಹಾಲಿ ಸಂಸದರಿಗೆ ಟೆಕೆಟ್ ಕೊಡದಿರುವಂತೆ ನಿರ್ಧರಿಸಲಾಗಿದ್ದು, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ಈಗಾಗಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೇ ಚಾಮರಾಜನಗರದ ಸಂಸದ ಶ್ರೀನಿವಾಸ ಪ್ರಸಾದ್ ಅವರು ಮುಂದಿನ ಮಾರ್ಚ್ ನಲ್ಲಿ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ ಎಂದು ಹೇಳಿದ್ದಾರೆ.
ಅಲ್ಲದೇ ಚಿಕ್ಕಬಳ್ಳಾಪುರದ ಸಂಸದ ಬಚ್ಚೇಗೌಡ, ಕೋಲಾರ ಸಂಸದ ಮುನಿಸ್ವಾಮಿ, ವಿಜಯಪುರ ಸಂಸದ ರಮೇಶ್ ಜಿಗಜಿಣಗಿ, ತುಮಕೂರು ಸಂಸದ ಜಿ.ಎಸ್. ಬಸವರಾಜು, ಕೊಪ್ಪಳದ ಸಂಸದ ಸಂಗಣ್ಣ ಕರಡಿ, ದಾವಣಗೆರೆಯ ಸಂಸದ ಜಿ.ಎಂ. ಸಿದ್ದೇಶ್ವರ ಅವರು ಸೇರಿದಂತೆ ಹಲವು ನಾಯಕರಿಗೆ ಈ ಬಾರೀ ಟಿಕೆಟ್ ನೀಡದಿರಲು ನಿರ್ಧರಿಸಿದೆ ಎನ್ನಲಾಗಿದೆ. ನಿಕಟಪೂರ್ವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೂ ಈ ಬಾರಿ ಬಿಜೆಪಿ ಟಿಕೆಟ್ ಸಿಗುವುದು ಅನುಮಾನ ಎಂದು ಹೇಳಲಾಗಿದೆ. ಅನಾರೋಗ್ಯದ ಕಾರಣದಿಂದಾಗಿ ಪಕ್ಷದ ಕಾರ್ಯಚಟುವಟಿಕೆಯಿಂದ ಅಂತರವನ್ನ ಕಾಯ್ದ ಕೊಡಿರುವ ಉತ್ತರ ಕನ್ನಡ ಕ್ಷೇತ್ರದ ಸಂಸದ ಅನಂತ್ ಕುಮಾರ್ ಹೆಗ್ಡೆಯವರಿಗೂ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.