ರಾಮನಗರ: ”ಕಳ್ಳಕಾಕರ ರಕ್ಷಣೆಗೆ ಈ ಸರ್ಕಾರ ಇದೆ ಎನ್ನುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆಯುವ ನಿರ್ಧಾರ ಕೈಗೊಂಡ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ”ಕಳ್ಳಕಾಕರ ರಕ್ಷಣೆಗೆ ಈ ಸರ್ಕಾರ ಇದೆ ಎನ್ನುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಕಿಡಿಕಾರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ವಕೀಲರಾಗಿ, ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಆದರೆ, ಅವರ ನೇತೃತ್ವದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂ ಕೋರ್ಟ್ ನೀಡಿರುವ ಹಲವಾರು ತೀರ್ಪುಗಳು ನಮ್ಮ ಕಣ್ಣಮುಂದೆ ಇವೆ. ಈಗಾಗಲೇ ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್ನಲ್ಲಿ ವಿಚಾರಣೆ ನಡೆದು ಆದೇಶಗಳು ಬಂದಿವೆ. ಸಿಬಿಐ ತನಿಖೆ ರದ್ದು ಕೋರಿ ಡಿ.ಕೆ. ಶಿವಕುಮಾರ್ ಅವರು ಎರಡು ಸಲ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿಲ್ಲ. ಇದು ಸಿಎಂಗೆ ಗೊತ್ತಿಲ್ಲವೇ” ಎಂದು ಪ್ರಶ್ನಿಸಿದರು.