►ಜಮ್ಮು ಕಾಶ್ಮೀರದಲ್ಲಿ ಸೆ. 30 ರೊಳಗೆ ಚುನಾವಣೆ ನಡೆಸಲು ಆದೇಶ
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಅಷ್ಟೇ ಅಲ್ಲದೇ 2024ರ ಸೆಪ್ಟೆಂಬರ್ ಒಳಗಡೆ ವಿಧಾನಸಭಾ ಚುನಾವಣೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠದಿಂದ ತೀರ್ಪು ಪ್ರಕಟವಾಗಿದೆ. ವಿಶೇಷ ಸ್ಥಾನವನ್ನು ರದ್ದು ಪಡಿಸಿದ ಕೇಂದ್ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ಸುಪ್ರೀಂಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.
ತೀರ್ಪು ಓದಿದ ಸಿಜೆಐ ಚಂದ್ರಚೂಡ್ ಅವರು, ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ ತಾತ್ಕಾಲಿಕ. ಭಾರತದ ಸಂವಿಧಾನದ 1 ಮತ್ತು 370 ನೇ ವಿಧಿಗಳಿಂದ ಸ್ಪಷ್ಟವಾದಂತೆ ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ. ರಾಜ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಆರ್ಟಿಕಲ್ 370 ವಿಧಿಸಿದ್ದು ಮಧ್ಯಂತರ ವ್ಯವಸ್ಥೆಯಾಗಿದೆ. ರಾಷ್ಟ್ರಪತಿಗಳು ರದ್ದು ಪಡಿಸಿದ ಆದೇಶ ಸರಿಯಾಗಿದೆ ಎಂದು ಹೇಳಿದೆ.
ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಶೀಘ್ರವೇ ಮರುಸ್ಥಾಪಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಲಾಗುವುದು. ಹಾಗೆಯೇ, ಅಲ್ಲಿನ ವಿಧಾನಸಭೆಗೆ 2024ರ ಸೆಪ್ಟೆಂಬರ್ 30ರ ಒಳಗೆ ಚುನಾವಣೆ ನಡೆಸಲು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಲಾಗುವುದು ಎಂದು ಸಿಜೆಐ ಹೇಳಿದ್ದಾರೆ.