ಮೈಸೂರು: ಬಹುಮತದಲ್ಲಿ ಆರಿಸಿ ಬಂದು ರಚನೆಯಾದ ಸರ್ಕಾರವನ್ನು ಬೀಳಿಸುತ್ತೇವೆ ಎಂಬ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಎಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪಥನವಾಗುತ್ತೆ ಎಂಬ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಈಗ ಅಧಿವೇಶನ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡಿ ಸರ್ಕಾರವನ್ನು ಅಲುಗಾಡಿಸಲು ಮುಂದಾಗೋದು ಯಾವ ನೈತಿಕತೆ? ನಾವು ಗಟ್ಟಿಯಾಗಿದ್ದೇವೆ, ಆ ರೀತಿ ಏನೂ ಆಗಲ್ಲ ಅದು ಬೇರೆ ವಿಷಯ ಎಂದರು.
ರಾಜ್ಯದಲ್ಲಿ ಬಹುಮತದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೀಗಿರುವಾಗ ವಿರೋಧ ಪಕ್ಷದವರಾಗಲಿ ಅಥವಾ ಯಾರೇ ಆಗಲಿ ಸರ್ಕಾರವನ್ನು ಬೀಳಿಸುತ್ತೇವೆ ಎಂಬುದು ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಬೆಳವಣಿಗೆಯಲ್ಲ ಎಂದು ಅವರು ಹೇಳಿದರು.