ಬೆಂಗಳೂರು: ಅಂದ್ರಹಳ್ಳಿಯ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.
ಬೆಂಗಳೂರಿನ ಪೀಣ್ಯ ಬಳಿಯಿರುವ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಘಟನೆಯ ನಂತರ, ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಆಗಮಿಸಿ, ಆವರಣದ ಹೊರಗೆ ಪ್ರತಿಭಟನೆ ನಡೆಸಿ, ಶಿಕ್ಷಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಕೂಡಲೇ ಶಾಲೆಗೆ ಆಗಮಿಸಿದ ಬೆಂಗಳೂರು ಉತ್ತರ ವಿಭಾಗದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಜಿ.ಅಂಜನಪ್ಪ ಅವರು, ಪರಿಶೀಲನೆ ನಡೆಸಿ, ತಪ್ಪಿತಸ್ಥ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.