ಬೆಂಗಳೂರು : ಹಿಜಾಬ್ ನಿಷೇಧ ವಾಪಸ್ ಪಡೆಯುವ ತೀರ್ಮಾನವನ್ನು ಸಿದ್ದರಾಮಯ್ಯ ತೆಗೆದುಕೊಂಡಿದ್ದಾರೆ. ಕೂಡಲೇ ಸಿಎಂ ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಒತ್ತಾಯಿಸಿದರು.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಧರ್ಮದವರೂ ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎನ್ನುವುದು ಭಾರತೀಯ ಜನತಾ ಪಕ್ಷ ಆಶಯವಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯು ನಮ್ಮ ಆಶಯಕ್ಕೆ ವಿರುದ್ಧವಾಗಿದೆ. ಹಾಗಾಗಿ ಸರ್ಕಾರದ ನಿಲುವನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದರು.
ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಯಾರು ಕೇಳಿದ್ದರು. ಈ ರೀತಿಯ ರಾಜಕೀಯ ಮಾಡುವುದನ್ನು ಮುಖ್ಯಮಂತ್ರಿಗಳು ಬಿಡಬೇಕು. ಈ ರೀತಿ ಮಾಡುವುದರಿಂದ ಅಲ್ಪಸಂಖ್ಯಾತರನ್ನು ತೃಪ್ತಿಪಡಿಸಲು ಸಾಧ್ಯವಿಲ್ಲ. ಲೋಕಸಭಾ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎನ್ನುವುದನ್ನು ಮರೆತು ಈ ರೀತಿ ಮಾತನಾಡುತ್ತಿದ್ದಾರೆ. ಇದನ್ನು ಖಂಡಿಸುತ್ತೇನೆ ಎಂದರು.